ಗಣೇಶೋತ್ಸವ ಹಾಗೂ ಈದ್ ಮಿಲಾದ್: ಸೌಹಾರ್ದ ಸಭೆಯಲ್ಲಿ ಡಿಜೆ ಬಳಕೆ ನಿಯಮ ಪಾಲನೆಗೆ ಹು-ಧಾ ಪೋಲಿಸ್ ಆಯುಕ್ತ ಎನ್ ಶಶಿಕುಮಾರ್ ಸೂಚನೆ

Spread the love

ಹುಬ್ಬಳ್ಳಿ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಡಿಜೆ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಸೂಚನೆ ನೀಡಿದ್ದಾರೆ. ನ್ಯಾಯಾಲಯದ ಆದೇಶದ ಮುಂದೆ ಯಾರೂ ದೊಡ್ಡವರಲ್ಲ, ಅದನ್ನು ಮೀರಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹು-ಧಾ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಮಂಗಳವಾರ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡಲು ಪ್ರಯತ್ನಿಸುವ ಕೆಲವು ಕಿಡಿಗೇಡಿಗಳನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮತ್ತಷ್ಟು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.ಹುಬ್ಬಳ್ಳಿ, ಧಾರವಾಡ ನಗರಗಳಲ್ಲಿ ಗಣೇಶೋತ್ಸವ ಮತ್ತು ಈದ್ ಮಿಲಾದ್‌ಗಾಗಿ ಪ್ರತ್ಯೇಕ ಸೌಹಾರ್ದ ಸಭೆಗಳನ್ನು ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು. ಅಲ್ಲದೆ, ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗುವುದು ಎಂದು ಅವರು ಹೇಳಿದರು.

ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಲು ಕರೆ
ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಭಕ್ತಿಗೆ ಭಂಗ ಬಾರದಂತೆ ಹಬ್ಬವನ್ನು ಆಚರಿಸಬೇಕು ಎಂದು ಕರೆ ನೀಡಿದರು. ಡಿಜೆಗಳ ಬದಲು ಡೊಳ್ಳು, ವೀರಗಾಸೆ, ಕರಡಿಮಜಲು, ಚಂಡೆ ವಾದ್ಯಗಳಂತಹ ಸಾಂಪ್ರದಾಯಿಕ ವಾದ್ಯಗಳನ್ನು ಬಳಸುವ ಮೂಲಕ ಸಂಸ್ಕೃತಿಯನ್ನು ಉಳಿಸಬೇಕು ಎಂದು ಅವರು ಸಲಹೆ ನೀಡಿದರು.

ಹಿಂದು-ಮುಸ್ಲಿಂ ಸಹೋದರತ್ವಕ್ಕೆ ಒತ್ತು
ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ಮೋಹನ ಲಿಂಬಿಕಾಯಿ ಮಾತನಾಡಿ, ಹುಬ್ಬಳ್ಳಿ ಹಿಂದು-ಮುಸ್ಲಿಮರು ಸಹೋದರರಂತೆ ಬಾಳುತ್ತಿರುವ ನೆಲ. ಹಬ್ಬಗಳ ಸಂದರ್ಭದಲ್ಲಿ ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈ ಬಾರಿ ಗಣೇಶೋತ್ಸವಕ್ಕೆ ಡಿಜೆ ಬಳಕೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಮುಸ್ಲಿಂ ಧರ್ಮಗುರು ತಾಜುದ್ದೀನ ಖಾದ್ರಿ ಪೀರಾ, ಕ್ರಿಶ್ಚಿಯನ್ ಧರ್ಮಗುರು ಮೆಕ್ಸಿಮ್ ಡಿಸೋಜಾ, ಸಿಖ್ ಧರ್ಮಗುರು ಗ್ಯಾನಿ ಗುರುವಂತ ಸಿಂಗ್, ಗಣೇಶೋತ್ಸವ ಮಹಾಮಂಡಳದ ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ ಹಾಗೂ ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್.ವಿ. ಪ್ರಸಾದ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಡಿಸಿಪಿ ಮಹಾನಿಂಗ್ ನಂದಗಾಂವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Leave a Reply

Your email address will not be published. Required fields are marked *