ಜನವರಿ 5 ರಂದು ಧಾರವಾಡದಲ್ಲಿ ‘ಪಂಚ ಗ್ಯಾರಂಟಿ ಉತ್ಸವ’: ಅದ್ಧೂರಿ ಆಚರಣೆಗೆ ಸಿದ್ಧತೆ

Spread the love

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಭ್ರಮಕ್ಕಾಗಿ ಜಿಲ್ಲೆಯಲ್ಲಿ ಬರುವ ಜನವರಿ 5, 2026 ರಂದು ಅತ್ಯಂತ ಅದ್ಧೂರಿಯಾಗಿ ‘ಪಂಚ ಗ್ಯಾರಂಟಿ ಉತ್ಸವ’ವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

​ಸೋಮವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ವಿಭಾಗೀಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ಅವರು ಈ ವಿಷಯ ತಿಳಿಸಿದರು. ಈ ಉತ್ಸವವು ಸರ್ಕಾರದ ಸೌಲಭ್ಯಗಳು ಜನಸಾಮಾನ್ಯರಿಗೆ ತಲುಪಿರುವುದರ ಪ್ರತಿಬಿಂಬವಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

​ಉತ್ಸವದ ಯಶಸ್ವಿ ನಿರ್ವಹಣೆಗಾಗಿ ಈಗಾಗಲೇ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅವರು ತಿಳಿಸಿದರು. ಜಿಲ್ಲೆಯಾದ್ಯಂತ ಇರುವ ಎಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಆಯಾ ಇಲಾಖಾ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

​ವಿಶೇಷವಾಗಿ, ಪಂಚ ಗ್ಯಾರಂಟಿಗಳಿಂದ ಜನರ ಜೀವನದಲ್ಲಿ ಉಂಟಾಗಿರುವ ಧನಾತ್ಮಕ ಬದಲಾವಣೆಗಳನ್ನು ಜನರಿಗೆ ತಲುಪಿಸಲು ಪ್ರತಿ ಯೋಜನೆಗೆ ಒಂದರಂತೆ ಒಟ್ಟು ಐದು ವಿಶೇಷ ಕಿರುಚಿತ್ರಗಳನ್ನು ಸಿದ್ಧಪಡಿಸಲು ಈ ಸಂದರ್ಭದಲ್ಲಿ ಸೂಚಿಸಲಾಯಿತು. ಇದರೊಂದಿಗೆ ಫಲಾನುಭವಿಗಳ ನೈಜ ಯಶೋಗಾಥೆಗಳನ್ನು ಒಳಗೊಂಡ ಸಾಕ್ಷ್ಯಚಿತ್ರಗಳ ಪ್ರದರ್ಶನವೂ ನಡೆಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಅವುಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದು ಎಂದು ಉಪಾಧ್ಯಕ್ಷರು ಭರವಸೆ ನೀಡಿದರು.

​ಸಭೆಯಲ್ಲಿ ಧಾರವಾಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *