ಹೊಸ ವರ್ಷದ ಮೊದಲ ದಿನವೇ ಬೆಚ್ಚಿಬಿದ್ದ ಹುಬ್ಬಳ್ಳಿ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Spread the love

ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮದ ನಡುವೆಯೇ ನಗರದ ನವಆನಂದನಗರದಲ್ಲಿ ಭೀಕರ ಕೊಲೆ ಪ್ರಕರಣವೊಂದು ವರದಿಯಾಗಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಪತಿಯೇ ಪತ್ನಿಯ ಕತ್ತು ಹಿಸುಕಿ ಜೀವರಕ್ಷಕನಾಗಬೇಕಿದ್ದವನೇ ಹಂತಕನಾದ ಘಟನೆ ನಡೆದಿದೆ. ಅಂಜುಮ (33) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದು, ಪತಿ ಮೆಹಬೂಬ್ ತನಿಬಂದ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

​ನವಆನಂದನಗರದ ಮದೀನಿ ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ದಂಪತಿ ಕಳೆದ ಒಂದು ತಿಂಗಳ ಹಿಂದಷ್ಟೇ ಇಲ್ಲಿಗೆ ವಾಸ್ತವ್ಯ ಬದಲಿಸಿದ್ದರು. ಆದರೆ, ಇವರ ನಡುವೆ ಪ್ರತಿದಿನವೂ ಕಿರಿಕಿರಿ ಹಾಗೂ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ. ಎಂದಿನಂತೆ ಇಂದು ಮುಂಜಾನೆ ಸುಮಾರು 8 ಗಂಟೆಯ ವೇಳೆಗೆ ದಂಪತಿಯ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಇದು ವಿಕೋಪಕ್ಕೆ ತಿರುಗಿದೆ. ಸಿಟ್ಟಿನ ಭರದಲ್ಲಿ ಮೆಹಬೂಬ್ ತನ್ನ ಪತ್ನಿ ಅಂಜುಮಳ ಕತ್ತು ಹಿಸುಕಿದ್ದು, ತೀವ್ರ ಉಸಿರುಗಟ್ಟಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

​ಘಟನೆಯ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿ ಮೆಹಬೂಬ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ಇಂತಹ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *