ಧಾರವಾಡ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 14, 2026 ರಂದು ‘ರಾಷ್ಟ್ರೀಯ ಲೋಕ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ಪಿ.ಎಫ್. ದೊಡ್ಡಮನಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನಿರ್ದೇಶನದಂತೆ ಈ ಅದಾಲತ್ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಬಾಕಿ ಇರುವ ಪ್ರಕರಣಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ:
ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಆಗಬಲ್ಲ ಪ್ರಕರಣಗಳು ಹಾಗೂ ನ್ಯಾಯಾಲಯದ ಮೆಟ್ಟಿಲೇರುವ ಮುನ್ನ ಇರುವ ‘ಪೂರ್ವವ್ಯಾಜ್ಯ’ (Pre-litigation) ಪ್ರಕರಣಗಳನ್ನು ಈ ಲೋಕ ಅದಾಲತ್ ಮೂಲಕ ಪರಸ್ಪರ ಒಪ್ಪಿಗೆಯೊಂದಿಗೆ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಆಸಕ್ತಿ ವಹಿಸಬೇಕು ಎಂದು ನ್ಯಾಯಾಧೀಶರು ನಿರ್ದೇಶಿಸಿದ್ದಾರೆ. ಸಾರ್ವಜನಿಕರು ಈ ಲೋಕ ಅದಾಲತ್ ಸದುಪಯೋಗ ಪಡಿಸಿಕೊಂಡು ನ್ಯಾಯಾಲಯದ ಅಲೆದಾಟ ಹಾಗೂ ಸಮಯವನ್ನು ಉಳಿಸಿಕೊಳ್ಳಬಹುದಾಗಿದೆ.

