

ಬೆಂಗಳೂರು: ಈ ಬಾರಿಯ ಗಣೇಶೋತ್ಸವದಲ್ಲಿ ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣಪತಿ ಮೂರ್ತಿಗಳನ್ನು ಬಳಸುವುದಿಲ್ಲ ಎಂದು ಸ್ಥಳೀಯ ಸಂಸ್ಥೆಗಳಿಗೆ ಮುಚ್ಚಳಿಕೆ ಪತ್ರ ಬರೆದು ಕೊಡಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಮಾರಕವಾಗದಂತೆ ಹಬ್ಬವನ್ನು ಆಚರಿಸಲು ಸಾರ್ವಜನಿಕರಿಗೆ ಮನವಿ ಮಾಡಿದರು.
ಪಿಒಪಿ ಗಣಪತಿ ಏಕೆ ಬೇಡ?
ಪಿಒಪಿ ಗಣಪತಿ ಮೂರ್ತಿಗಳು ನೀರಿನಲ್ಲಿ ಕರಗುವುದಿಲ್ಲ. ಅವು ವಿಷಕಾರಿ ಅಂಶಗಳನ್ನು ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳನ್ನು ನೀರಿಗೆ ಸೇರಿಸುತ್ತವೆ. ಇದರಿಂದ ಜಲಚರಗಳಿಗೆ ಹಾನಿಯಾಗುತ್ತದೆ ಎಂದು ಸಚಿವರು ವಿವರಿಸಿದರು. ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸಲಾಗುತ್ತದೆ. ಈ ಮಾದರಿಯನ್ನು ರಾಜ್ಯದ ಇತರ ಜಿಲ್ಲೆಗಳೂ ಅನುಸರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇದಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಹಸಿರು ಪಟಾಕಿ ಮಾತ್ರ ಬಳಸಿ
ಗಣೇಶೋತ್ಸವದ ಮೆರವಣಿಗೆಯಲ್ಲಿ ಪಟಾಕಿ ಸಿಡಿಸುವ ಬಗ್ಗೆಯೂ ಸಚಿವರು ಎಚ್ಚರಿಕೆ ನೀಡಿದರು. ಸುಪ್ರೀಂ ಕೋರ್ಟ್ ಆದೇಶದಂತೆ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ. ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯೊಳಗೆ ಮಾತ್ರ ಸಿಡಿಸಬೇಕು ಎಂದು ಅವರು ಮನವಿ ಮಾಡಿದರು. ಅಲ್ಲದೆ, ಪರಿಸರಕ್ಕೆ ಮಾರಕವಾದ ಪಟಾಕಿಗಳನ್ನು ಬಳಸದೆ, ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ತಿಳಿಸಿದರು.
ಏಕ ಬಳಕೆ ಪ್ಲಾಸ್ಟಿಕ್ ನಿಷೇಧ:
ಮಣ್ಣಲ್ಲಿ ಕರಗದ ಮತ್ತು ಸುಟ್ಟಾಗ ವಿಷಕಾರಿ ಅಂಶಗಳನ್ನು ಗಾಳಿಗೆ ಸೇರಿಸುವ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಈ ನಿಯಮಗಳ ಪಾಲನೆಯ ಕುರಿತು ಸ್ಥಳೀಯ ಸಂಸ್ಥೆಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು.
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಗಳು ಪ್ರಸ್ತುತ ವಿಶ್ವ ಎದುರಿಸುತ್ತಿರುವ ದೊಡ್ಡ ಸವಾಲುಗಳು. ಹೀಗಾಗಿ, ನಮ್ಮ ಗ್ರಹವನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

