
ಧಾರವಾಡ, ಜ. ೧೪: ಕಮಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಅವಧಿಯಲ್ಲಿಯೇ ಈ ಘಟನೆ ನಡೆದಿದ್ದು, ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ನೀಡುವ ವರದಿ ಪರಿಶೀಲಿಸಿ, ಲೋಪ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ ನೀಡಿದರು.
ಅವರು ಬುಧವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಪಹರಣದಿಂದ ಪಾರಾಗಿ ಸಖಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಗಾಯಾಳು ಮಕ್ಕಳು ಹಾಗೂ ಅವರ ಕುಟುಂಬದವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು, ಘಟನೆ ನಡೆದ ಬಗೆಯನ್ನು ಮಕ್ಕಳಿಂದಲೇ ಕೇಳಿ ಮಾಹಿತಿ ಪಡೆದರು. ಮಕ್ಕಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪೋಷಕರು ಆತಂಕ ಪಡುವ ಅಗತ್ಯವಿಲ್ಲ, ಮಕ್ಕಳ ಸುರಕ್ಷತೆಗೆ ಜಿಲ್ಲಾಡಳಿತ ಬದ್ಧವಾಗಿದೆ. ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ವಿಶೇಷ ಅಭಿಯೋಜಕರ ನೇಮಕಕ್ಕೆ ಚಿಂತನೆ:
ಆರೋಪಿ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯು ಹಿಂದೆಯೂ ಇಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಮಾಹಿತಿಯಿದೆ. ಆದ್ದರಿಂದ ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಅವಶ್ಯಕತೆ ಇದ್ದಲ್ಲಿ ಈ ಪ್ರಕರಣಕ್ಕೆ ವಿಶೇಷ ಅಭಿಯೋಜಕರನ್ನು (Special Public Prosecutor) ನೇಮಿಸಲು ಪೊಲೀಸ್ ಇಲಾಖೆ ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ:
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಶಾಲಾ ಅವಧಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಶಾಲೆಯಲ್ಲಿದ್ದು ಮಕ್ಕಳ ಸುರಕ್ಷತೆಯ ಬಗ್ಗೆ ನಿಗಾ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಸುತ್ತೋಲೆ ಹೊರಡಿಸಲಾಗುವುದು. ಹಾಗೆಯೇ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ ಮತ್ತು ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಎಸಿಪಿ ಪ್ರಶಾಂತ ಸಿದ್ದನಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಡಿಎಚ್ಒ ಡಾ. ಎಸ್.ಎಮ್. ಹೊನಕೇರಿ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಪ್ರಭು ಗಂಗೆನಹಳ್ಳಿ ಉಪಸ್ಥಿತರಿದ್ದರು.

