ಹುಬ್ಬಳ್ಳಿ: ಹಳೆ ದ್ವೇಷಕ್ಕೆ ರಕ್ತಪಾತ: ಅಣ್ಣನಿಗೆ 7 ಬಾರಿ ಚಾಕು ಇರಿದು ಕೊಲೆಗೆ ಯತ್ನಿಸಿದ ತಮ್ಮ

Spread the love

ಹುಬ್ಬಳ್ಳಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸ್ವಂತ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೆ ಯತ್ನಿಸಿದ ಘೋರ ಘಟನೆ ನಗರದ ಹಳೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ.

​ಗಂಭೀರವಾಗಿ ಗಾಯಗೊಂಡವರನ್ನು ಮಲ್ಲೇಶ್ ಪೂಜಾರ (೪೨) ಎಂದು ಗುರುತಿಸಲಾಗಿದೆ. ಮಲ್ಲೇಶ್ ಅವರು ತಮ್ಮ ಮನೆಯ ಮುಂಭಾಗದಲ್ಲಿ ಮದ್ಯದ ಅಮಲಿನಲ್ಲಿ ಕುಳಿತಿದ್ದರು. ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಅವರ ಸಹೋದರ ಪ್ರದೀಪ್, ಹಳೆಯ ದ್ವೇಷದ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಪ್ರದೀಪ್ ತನ್ನ ಬಳಿಯಿದ್ದ ಚಾಕುವಿನಿಂದ ಅಣ್ಣ ಮಲ್ಲೇಶ್ ಅವರಿಗೆ ಬರೋಬ್ಬರಿ ೭ ಬಾರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

​ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಲ್ಲೇಶ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *