
ನವಲಗುಂದ: 1950ರಲ್ಲಿ ಸಂವಿಧಾನ ಜಾರಿಗೆ ಬಂದ ಈ ದಿನದಂದು ಭಾರತವು ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿತು. ಈ ಮಹತ್ವದ ದಿನದ ಹಿಂದೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವಿದ್ದು, ಅದನ್ನು ಪ್ರತಿಯೊಬ್ಬ ಭಾರತೀಯನೂ ಸದಾ ಸ್ಮರಿಸಬೇಕು ಎಂದು ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ ತಿಳಿಸಿದರು.
ತಾಲೂಕಿನ ಗೊಬ್ಬಗುಂಪಿ ಗ್ರಾಮದ ರೇವಣಸಿದ್ದೇಶ್ವರ ಯುವಕ ಮಂಡಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಏಕತೆ ಮತ್ತು ಅಭಿವೃದ್ಧಿಗಾಗಿ ಶ್ರಮಿಸಲು ಈ ಸುದಿನ ನಮಗೆ ಸದಾ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸೈನಿಕರಾದ ಅರುಣ ಸಾಲಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ಮಲ್ಲಿಕಾರ್ಜುನಸ್ವಾಮಿ ಮಠಪತಿ, ಬಾಪುಗೌಡ ಕುಲಕರ್ಣಿ, ನಾಗಪ್ಪ ಮುಗದ, ಮಹಾಂತೇಶ ಸಾಲಿ, ಚನ್ನಬಸಪ್ಪ ಕುಂದಗೋಳ, ಪ್ರಭು ಸೂರಪ್ಪನವರ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಸರ್ಕಾರಿ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

