ಗೃಹಲಕ್ಷ್ಮಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಶ್ಯಾನಪ್ಪಗೌಡ ಪಾಟೀಲ ಸೂಚನೆ

Spread the love

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತಾಗಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮತ್ತು ಸ್ಥಳಾಂತರಗೊಂಡ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ನಿರಂತರವಾಗಿ ಪರಿಷ್ಕರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

​ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣದ ಹೆಗ್ಗುರುತಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ ಶೇ. 97.68 ರಷ್ಟು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 24 ಕಂತುಗಳಲ್ಲಿ ಜಿಲ್ಲೆಯ ಫಲಾನುಭವಿಗಳಿಗೆ ಒಟ್ಟು 1816.52 ಕೋಟಿ ರೂಪಾಯಿ ಸಹಾಯಧನ ಜಮೆಯಾಗಿದೆ ಎಂದು ಮಾಹಿತಿ ನೀಡಿದರು. ಯುವನಿಧಿ ಯೋಜನೆಯಡಿ ನೋಂದಾಯಿತ ಪದವೀಧರರಿಗೆ ಕೌಶಲ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ತಾಲೂಕು ಮಟ್ಟದಲ್ಲಿ ವಿಶೇಷ ಕ್ಯಾಂಪೇನ್ ಆಯೋಜಿಸಬೇಕು ಎಂದು ಅವರು ತಿಳಿಸಿದರು. ಗೃಹ ಜ್ಯೋತಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರಿಂದ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಪಡಿತರ ವಿತರಣೆಯಲ್ಲಿ ವ್ಯತ್ಯಯವಾದಲ್ಲಿ ಸ್ಥಳೀಯ ಅಧಿಕಾರಿಗಳು ತಕ್ಷಣ ಸ್ಥಳ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಅವರು ನಿರ್ದೇಶಿಸಿದರು.

​ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ವಿಳಂಬ ಅಥವಾ ಅನರ್ಹರಿಗೆ ಸೌಲಭ್ಯ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳು ಸಲ್ಲಿಸುವ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿಯೇ ಆಯ್ಕೆ ಮಾಡಬೇಕು ಹಾಗೂ ಪ್ರಗತಿ ಪರಿಶೀಲನಾ ಸಭೆಗಳಿಗೆ ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ತರಬೇಕು ಎಂದು ಎಚ್ಚರಿಸಿದರು. ಇತ್ತೀಚೆಗೆ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಮಾವೇಶದಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರತ್ನಾ ತೇಗೂರಮಠ ಮತ್ತು ವಿವಿಧ ತಾಲೂಕು ಸಮಿತಿಗಳ ಅಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *