
ಧಾರವಾಡ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್ ಆರ್. ಅವರು ಬುಧವಾರ (ಫೆಬ್ರವರಿ 11) ಅಧಿಕಾರ ವಹಿಸಿಕೊಂಡರು. ಈ ಹಿಂದೆ ಧಾರವಾಡ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಇವರು, ಇದೀಗ ಜಿಲ್ಲೆಯ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ.
ಕರ್ನಾಟಕ ಸರ್ಕಾರದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕರಾಗಿದ್ದ ಸ್ನೇಹಲ್ ಆರ್. ಅವರನ್ನು ಸರ್ಕಾರವು ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ರಾಜ್ಯ ಸರ್ಕಾರ ನಿನ್ನೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ ಸ್ನೇಹಲ್ ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. 2017-18ರ ಅವಧಿಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದ್ದು, ಜಿಲ್ಲೆಯ ಭೌಗೋಳಿಕ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ಅವರಿಗೆ ಅಪಾರ ಪರಿಚಯವಿದೆ.
ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕಗಳನ್ನು ನೀಡುವ ಮೂಲಕ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತ ಕೋರಿದರು.
ಅಧಿಕಾರ ಸ್ವೀಕಾರದ ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಶುಭ ಕೋರಿದರು.

