ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಸಂಘಟಿತವಾಗಿ ಕೆಲಸ ಮಾಡಿ: ನೂತನ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕರೆ

Spread the love

ಧಾರವಾಡ: “ರಾಜ್ಯದಲ್ಲಿ ಧಾರವಾಡ ಜಿಲ್ಲೆಗೆ ತನ್ನದೇ ಆದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಇತಿಹಾಸವಿದೆ. ಜಿಲ್ಲೆಯ ಗೌರವವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಮತ್ತು ಸಮಗ್ರ ಅಭಿವೃದ್ಧಿ ಸಾಧಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದು ನೂತನ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

​ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಿದ ಜಿಲ್ಲಾಧಿಕಾರಿಗಳು, ಸರ್ಕಾರಿ ಕೆಲಸಗಳಲ್ಲಿ ಅನಗತ್ಯ ವಿಳಂಬ ಅಥವಾ ಉದಾಸೀನತೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ತಾಲೂಕು ಮತ್ತು ಕ್ಷೇತ್ರ ಮಟ್ಟದಲ್ಲೇ ಆಲಿಸಿ ಪರಿಹರಿಸಬೇಕು. ಜನಸಾಮಾನ್ಯರನ್ನು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡಿಸಬಾರದು. ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳನ್ನು ತಾಂತ್ರಿಕ ಸೌಲಭ್ಯಗಳ ಮೂಲಕ ಜನರ ಮನೆಬಾಗಿಲಿಗೆ ನಿಗದಿತ ಅವಧಿಯೊಳಗೆ ತಲುಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು.

​ಕರ್ತವ್ಯ ನಿರ್ವಹಣೆಯಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಅಥವಾ ಯೋಜನೆಗಳ ಅನುಷ್ಠಾನಕ್ಕೆ ಉತ್ತಮ ಸಲಹೆಗಳಿದ್ದಲ್ಲಿ ಮುಕ್ತವಾಗಿ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸದಾ ಸಿದ್ಧವಿದೆ. ತುರ್ತು ವಿಷಯಗಳಿದ್ದಲ್ಲಿ ಅಧಿಕಾರಿಗಳು ನೇರವಾಗಿ ತಮ್ಮನ್ನು ಭೇಟಿ ಮಾಡಬಹುದು ಎಂದು ತಿಳಿಸಿದ ಅವರು, ಸಾರ್ವಜನಿಕರ ಭೇಟಿಗಾಗಿ ಪ್ರತಿದಿನ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಒಂದು ತಂಡವಾಗಿ ಕೆಲಸ ಮಾಡುವ ಮೂಲಕ ಧಾರವಾಡ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸೋಣ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

​ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ ಅಬ್ದುಲ್ ಅಲಿಂ ಸಿದ್ದಕಿ, ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *