
ಧಾರವಾಡ: “ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಯಲ್ಲಿ ನಿರ್ಲಕ್ಷ್ಯ ವಹಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿರೀಕ್ಷಿತ ಫಲಿತಾಂಶ ನೀಡದ ಅತಿಥಿ ಶಿಕ್ಷಕರ ಬೋಧನಾ ಗುಣಮಟ್ಟವನ್ನು ವಿಶ್ಲೇಷಿಸಿ ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಕಟ್ಟುನಿಟ್ಟಿನ ಆದೇಶ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ. 50 ಕ್ಕಿಂತ ಕಡಿಮೆ ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ನೋಡಲ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು 37 ಶಾಲೆಗಳಲ್ಲಿ ಫಲಿತಾಂಶ ಕುಸಿದಿರುವುದು ವಿಶ್ಲೇಷಣೆಯಿಂದ ತಿಳಿದುಬಂದಿದೆ. ಇಂತಹ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣವನ್ನು ಹಿಂಪಡೆಯಲು ಮತ್ತು ಸರ್ಕಾರದಿಂದ ನೀಡಲಾಗುವ ಅನುದಾನವನ್ನು ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಕ್ಷಣವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಶಾಲೆಗಳ ಮಾನ್ಯತೆ ನವೀಕರಿಸುವಾಗ ಕೇವಲ ಕಟ್ಟಡದ ಸೌಕರ್ಯಗಳನ್ನಷ್ಟೇ ನೋಡದೆ, ಅಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಅಳತೆಗೋಲಾಗಿರಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಫಲಿತಾಂಶ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ವಾರ್ಷಿಕ ವೇತನ ಬಡ್ತಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಅತಿಥಿ ಶಿಕ್ಷಕರ ಕಾರ್ಯನಿರ್ವಹಣೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು; ಬೋಧನೆಯಲ್ಲಿ ಸುಧಾರಣೆ ಕಂಡುಬರದಿದ್ದಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವರಿಗೆ ಅವಕಾಶ ನೀಡಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಿದರು. ಸಿಆರ್‍ಪಿ, ಬಿಆರ್‍ಪಿ ಹಾಗೂ ಬಿಆರ್‍ಸಿ ಅಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಮತ್ತು ಶಾಲಾ ಭೇಟಿಯ ವರದಿಗಳನ್ನು ನಿಯಮಿತವಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬೇಕು. ಮೂರನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯು ಶೇ. 85 ಕ್ಕಿಂತ ಹೆಚ್ಚು ಫಲಿತಾಂಶ ಸಾಧಿಸುವ ಗುರಿ ಹೊಂದಬೇಕು ಎಂದು ಅವರು ತಿಳಿಸಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಸೇರಿದಂತೆ ವಿವಿಧ ತಾಲೂಕಿನ ಅಧಿಕಾರಿಗಳು ಹಾಗೂ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು

