ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಭಯಮುಕ್ತರಾಗಿ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕಿವಿಮಾತು

Spread the love

ಧಾರವಾಡ: “ವಿದ್ಯಾರ್ಥಿಗಳು ಪರೀಕ್ಷಾ ಒತ್ತಡಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಮತ್ತು ಭಯಮುಕ್ತರಾಗಿ ಪರೀಕ್ಷೆಯನ್ನು ಎದುರಿಸಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

​2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಇಂದು (ಫೆ.16) ಆಯೋಜಿಸಲಾಗಿದ್ದ ‘ಜ್ಞಾನ ಸಿಂಚನ’ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ತಮ ಅಂಕ ಗಳಿಸಲು ಹೇಗೆ ವ್ಯವಸ್ಥಿತವಾಗಿ ಅಧ್ಯಯನ ಮಾಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.

ತಜ್ಞರಿಂದ ಸಮಸ್ಯೆಗಳಿಗೆ ಪರಿಹಾರ:

​ಪರೀಕ್ಷಾ ಮಂಡಳಿ ನೀಡಿರುವ ನೀಲನಕ್ಷೆ (Blue Print), ಮಾದರಿ ಪ್ರಶ್ನೆಪತ್ರಿಕೆ ಹಾಗೂ ಪಾಠ ಆಧಾರಿತ ಪ್ರಮುಖ ಅಂಶಗಳನ್ನು ಸರಿಯಾಗಿ ಅಧ್ಯಯನ ಮಾಡಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಗೊಂದಲಗಳನ್ನು ಪರಿಹರಿಸಲು ಫೆಬ್ರವರಿ 18, 20, 23 ಮತ್ತು 25 ರವರೆಗೆ ಪ್ರತಿದಿನ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಈ ಫೋನ್ ಇನ್ ಕಾರ್ಯಕ್ರಮ ಲಭ್ಯವಿರುತ್ತದೆ. ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳಿಗೆ 20ಕ್ಕೂ ಹೆಚ್ಚು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

​ಇಂದಿನ ಕಾರ್ಯಕ್ರಮದಲ್ಲಿ 43 ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದು, ಜಿಲ್ಲೆಯ ಮೂಲೆ ಮೂಲೆಗಳಿಂದ ಕರೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷಾ ತಯಾರಿಗೆ ಸಂಬಂಧಿಸಿದ ಹಲವು ಪ್ರಶ್ನೆಗಳನ್ನು ಕೇಳಿ ತಜ್ಞರಿಂದ ಉತ್ತರ ಪಡೆದುಕೊಂಡರು.

​ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಶಿಕ್ಷಣಾಧಿಕಾರಿಗಳು, ಡಿವೈಪಿಸಿ, ವಿಷಯ ಪರಿವೀಕ್ಷಕರು ಹಾಗೂ ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

Leave a Reply

Your email address will not be published. Required fields are marked *