
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಅತ್ಯಂತ ಪಾರದರ್ಶಕ ಮತ್ತು ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಒತ್ತಾಯಿಸಿ ಸಚಿವರು ಹಾಗೂ ಶಾಸಕರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿದ ನಿಯೋಗವು, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯ ಕುರಿತು ಸುದೀರ್ಘ ಚರ್ಚೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ಮತದಾರರ ಪಟ್ಟಿ ತಯಾರಿಕೆಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು ಮತ್ತು ಪ್ರಕ್ರಿಯೆಯು ಸಂಪೂರ್ಣವಾಗಿ ನ್ಯಾಯಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.
ಕೇವಲ ಕಚೇರಿಗಳಲ್ಲಿ ಕುಳಿತು ಪಟ್ಟಿ ಸಿದ್ಧಪಡಿಸುವ ಬದಲಿಗೆ, ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡಿಸಬೇಕು ಹಾಗೂ ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡವರ ಹೆಸರನ್ನು ಕೈಬಿಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಿಶೇಷವಾಗಿ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂಬುದು ಆಯೋಗದ ಆದ್ಯತೆಯಾಗಲಿ ಎಂದು ನಿಯೋಗವು ಈ ಸಂದರ್ಭದಲ್ಲಿ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿತು. ದೋಷಮುಕ್ತ ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಚುನಾವಣಾ ಅಕ್ರಮಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ಈ ವೇಳೆ ಒತ್ತಾಯಿಸಲಾಯಿತು.
ಈ ಮಹತ್ವದ ನಿಯೋಗದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

