
ನವಲಗುಂದ: ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಸಂಸ್ಕಾರದಂತಹ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ನವಲಗುಂದ ವಲಯದ ಅಬಕಾರಿ ನಿರೀಕ್ಷಕರಾದ ರಾಮು ಆರೇಣ್ಣವರ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ನಗರದಲ್ಲಿರುವ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವ ಪೀಳಿಗೆಯು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಮೂಲಕ ಹೆತ್ತವರಿಗೆ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇಂಗ್ಲೀಷ್ ಉಪನ್ಯಾಸಕ ಮಲ್ಲಿಕಾರ್ಜುನ ಪಡೆಸುರ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯವಾಗಿದ್ದು, ವಿದ್ಯಾರ್ಥಿಗಳು ಈ ಭಾಷೆಯ ಮೇಲೆ ಪ್ರಭುತ್ವ ಸಾಧಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಉರ್ದು ಕ್ಲಸ್ಟರ್ ಸಿಆರ್ ಸಿ ಎಚ್.ಎಂ. ಗುರಾಣಿ ಅವರು ಮಾತನಾಡಿ, ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಸತತ ಅಧ್ಯಯನದಲ್ಲಿ ತೊಡಗಬೇಕು. ಉತ್ತಮ ಫಲಿತಾಂಶ ಪಡೆಯಲು ಸಾಮಾಜಿಕ ಮಾಧ್ಯಮಗಳಿಂದ ದೂರವಿರುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಎಚ್ಚರಿಸಿದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸುಭಾಸ ಮೊರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚೇತನ್ ಯಕ್ಕುಂಡಿ ಹಾಗೂ ವರ್ಷದ ಆದರ್ಶ ವಿದ್ಯಾರ್ಥಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡೆ ಮತ್ತು ಶೈಕ್ಷಣಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಭೆಯ ನಂತರ ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಯು.ಎಂ. ನದಾಫ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಇಸ್ಮಾಯಿಲ್ ನದಾಫ, ಪತ್ರಕರ್ತ ಮೆಹಬೂಬ ಅಣ್ಣಿಗೇರಿ ಸೇರಿದಂತೆ ಸಹ ಶಿಕ್ಷಕರಾದ ಬಾಬಾಜಾನ ಬಜಾರಮನಿ, ಫೈರೊಜಾ ಕುನ್ನಿಬಾವಿ, ಎಚ್.ಆರ್. ಅಗಸರ, ವಿದ್ಯಾವತಿ ಬೇವಿನಕಟ್ಟಿ, ಸಿ.ಐ. ಅಲ್ಲಿಬಾಯಿ ಹಾಗೂ ಗಣೇಶ ಪಡುಸನಗಿ ಸೇರಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು

