ಸರ್ವೋತ್ತಮ ಸೇವಾ ಪ್ರಶಸ್ತಿ: ಅರ್ಜಿ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನ

Spread the love

ಧಾರವಾಡ: ರಾಜ್ಯ ಸರ್ಕಾರದ 2026ನೇ ಸಾಲಿನ ಪ್ರತಿಷ್ಠಿತ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಾಗಿ ಅರ್ಹ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಸೇವೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಧಿಕಾರಿ ಮತ್ತು ನೌಕರರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನಾಮನಿರ್ದೇಶನ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾ ಮಟ್ಟದಲ್ಲಿ ಈ ಪ್ರಕ್ರಿಯೆಯ ಸುಗಮ ನಿರ್ವಹಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

​ಧಾರವಾಡ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸಕ್ತ ಮತ್ತು ಅರ್ಹ ನೌಕರರು ತಮ್ಮ ಸಾಧನೆಗಳ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಅರ್ಜಿಯನ್ನು ಸಿದ್ಧಪಡಿಸಿ, ಮಾರ್ಚ್ 4ರ ಸಂಜೆ 5 ಗಂಟೆಯೊಳಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಿ ಕಡ್ಡಾಯವಾಗಿ ಸ್ವೀಕೃತಿ ಪಡೆಯಬೇಕು. ನಿಗದಿಪಡಿಸಿದ ಕಾಲಮಿತಿಯ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪ್ರಶಸ್ತಿ ಆಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಾ. ತೇಜಸ್ವಿನಿ ನಾರಾಯಣಕರ ಅವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *