ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

Spread the love

ಹನೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಭಕ್ತರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

​ಬೆಟ್ಟದ ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯು ಸಂಚರಿಸುತ್ತಿರುವುದು ಕಂಡುಬಂದಿದ್ದು, ಈ ದೃಶ್ಯಗಳನ್ನು ಭಕ್ತರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ಹಿಂದೆ ಇದೇ ಮಾರ್ಗದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಮಗುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯೇ ಇದು ಎಂದು ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಈಗಾಗಲೇ ವಿವಿಧೆಡೆ ಬೋನುಗಳನ್ನು ಅಳವಡಿಸಿದ್ದರೂ, ಚಾಣಾಕ್ಷ ಚಿರತೆಯು ಬೋನಿಗೆ ಬೀಳದೆ ತಪ್ಪಿಸಿಕೊಳ್ಳುತ್ತಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

​ಪದೇ ಪದೇ ಜನವಸತಿ ಹಾಗೂ ದೇವಸ್ಥಾನದ ಸಮೀಪವೇ ಚಿರತೆ ಪ್ರತ್ಯಕ್ಷವಾಗುತ್ತಿರುವುದರಿಂದ ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಕಾಲ್ನಡಿಗೆಯಲ್ಲಿ ಬರುವ ಭಕ್ತರಲ್ಲಿ ಭೀತಿ ಹೆಚ್ಚಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿದು ಅರಣ್ಯದ ಆಳ ಪ್ರದೇಶಕ್ಕೆ ಬಿಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವರದಿ: ಕಾರ್ತಿಕ್ ಗೌಡ, ಹನೂರ

Leave a Reply

Your email address will not be published. Required fields are marked *