ಡ್ರಗ್ಸ್‌ ಮುಕ್ತ ಕರ್ನಾಟಕವೇ ನಮ್ಮ ಗುರಿ; ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಂಗಳೂರು: ಕರ್ನಾಟಕವನ್ನು ಸಂಪೂರ್ಣವಾಗಿ ಡ್ರಗ್ಸ್‌ ಮುಕ್ತ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಂಗಳವಾರದಂದು (ಅಕ್ಟೋಬರ್ 28,) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕಾರ್ಯಯೋಜನೆ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವಶಕ್ತಿ ಮಾದಕ ವ್ಯಸನಕ್ಕೆ ಬಲಿಯಾಗಬಾರದು
“ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ ಮತ್ತು ಅನೈತಿಕ ಪೊಲೀಸ್‌ಗಿರಿಯನ್ನು ನಿಯಂತ್ರಿಸಲು ಅಧಿಕಾರಿಗಳನ್ನು ಬದಲಾಯಿಸಿದ್ದನ್ನು ಉಲ್ಲೇಖಿಸಿದ ಅವರು, “ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ, ಸಾಧಿಸುವ ಛಲ ಬೇಕಷ್ಟೆ” ಎಂದು ಹುರಿದುಂಬಿಸಿದರು. ಇದೇ ರೀತಿ ಇಡೀ ರಾಜ್ಯವನ್ನು ಮಾದಕ ವಸ್ತು ಹಾವಳಿಯಿಂದ ಮುಕ್ತಗೊಳಿಸಲು ಸಾಧ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡ್ರಗ್ಸ್‌ ಜಾಲದೊಂದಿಗೆ ಶಾಮೀಲಾಗುವ ಪೊಲೀಸರಿಗೆ ಎಚ್ಚರಿಕೆ
ಪೊಲೀಸ್ ಇಲಾಖೆಯ ಕೆಲವು ಸಿಬ್ಬಂದಿ ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿದ್ದಾರೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ ಮುಖ್ಯಮಂತ್ರಿಗಳು, ರೌಡಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ ಎಂದರು. “ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ ಮತ್ತು ಈ ಜಾಲದ ಏಜೆಂಟರು ಯಾರು ಎಂಬುದು ಪೊಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯವನ್ನು “ಡ್ರಗ್ ಮುಕ್ತ ಕರ್ನಾಟಕ” ಆಗಿ ಮಾಡಿ ತೋರಿಸಿ ಎಂದು ಸೂಚಿಸಿದರು.

ಪೊಲೀಸ್‌ ಕ್ಯಾಪ್ ಮಾದರಿ ಬದಲಾವಣೆ: ಕಾರ್ಯಕ್ಷಮತೆಯೂ ಬದಲಾಗಲಿ
ಸುಮಾರು 70 ವರ್ಷಗಳಿಂದ ಅಂದರೆ 1956 ರಿಂದ ಇದ್ದ ಪೊಲೀಸ್ ಕ್ಯಾಪ್ ಮಾದರಿಯನ್ನು ಬದಲಾಯಿಸಿದ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನು ಆಯ್ಕೆ ಮಾಡಿದ್ದು ಕೂಡ ನಾನೇ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿ” ಎಂದರು.

“ಕೇವಲ ಕ್ಯಾಪ್ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *