ಧಾರವಾಡ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 6 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ಉತ್ತೀರ್ಣರಾದ ಹಾಗೂ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ. ಇನ್ನುಳಿದ ಶೇ. 25 ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು.
ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಧಾರವಾಡ ಗ್ರಾಮೀಣದ ಶಿಂಗನಹಳ್ಳಿ ಮತ್ತು ನಂ. 02 ವಸತಿ ಶಾಲೆ, ಅದರಗುಂಚಿಯ ಹೆಣ್ಣುಮಕ್ಕಳ ವಸತಿ ಶಾಲೆ ಹಾಗೂ ನವಲಗುಂದದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ ಹಾಗೂ ಸಮವಸ್ತ್ರ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಧಾರವಾಡ (9738287549), ಹುಬ್ಬಳ್ಳಿ (8867718261), ನವಲಗುಂದ (8746894524), ಕಲಘಟಗಿ (8951674107) ಹಾಗೂ ಕುಂದಗೋಳ (8904661872) ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

