
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಆಗಸ್ಟ್ 19) ಮತ್ತು ನಾಳೆ (ಆಗಸ್ಟ್ 20) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡು:
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿಯಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ.
ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು:
ದಕ್ಷಿಣ ಒಳನಾಡಿನ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗಬಹುದು.
ಇನ್ನು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿರಂತರ ಮಳೆಯ ಹಿನ್ನೆಲೆಯಲ್ಲಿ ಈ ಪ್ರದೇಶಗಳ ಜನರು ಮತ್ತು ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

