ಜಿಲ್ಲೆಯ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಸಿಇಓ ಭುವನೇಶ ಪಾಟೀಲ

Spread the love

ಧಾರವಾಡ: “ಜಿಲ್ಲೆಯ ಸಮಗ್ರ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಜನಹಿತ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

​ಕೃಷಿ, ಸಣ್ಣ ಉದ್ಯಮ, ಸ್ವ-ಉದ್ಯೋಗ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು ಕಾಲಮಿತಿಯಲ್ಲಿ ಲಭ್ಯವಾಗಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಸಾಲ ಮತ್ತು ಠೇವಣಿ ಅನುಪಾತವನ್ನು ಸುಧಾರಿಸಲು ಎಲ್ಲ ಬ್ಯಾಂಕುಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಉದ್ಯೋಗ ಸೃಷ್ಟಿ ಕಾರ್ಯಕ್ರಮಗಳಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸೈಬರ್ ವಂಚನೆಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಡಿಜಿಟಲ್ ಬ್ಯಾಂಕಿಂಗ್ ಉತ್ತೇಜಿಸುವ ಮೂಲಕ ಆರ್ಥಿಕ ಶಿಸ್ತು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

​ಇದೇ ಸಂದರ್ಭದಲ್ಲಿ ಬ್ಯಾಂಕುಗಳ ಸಾಮಾಜಿಕ ಹೊಣೆಗಾರಿಕೆ (CSR) ಬಗ್ಗೆ ಮಾತನಾಡಿದ ಸಿಇಓ ಅವರು, ಬ್ಯಾಂಕುಗಳು ತಮ್ಮ ಸಿಎಸ್‍ಆರ್ ನಿಧಿಯನ್ನು ಬಳಸಿ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಕ್ಲಾಸ್‌ರೂಮ್, ಗ್ರಂಥಾಲಯಗಳ ಸ್ಥಾಪನೆ ಹಾಗೂ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯಕ್ಕೆ ಕ್ರಿಯಾಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಈ ಕುರಿತು ಶೀಘ್ರದಲ್ಲೇ ಬ್ಯಾಂಕ್ ವ್ಯವಸ್ಥಾಪಕರ ಪ್ರತ್ಯೇಕ ಸಭೆ ಕರೆಯಲಾಗುವುದು ಎಂದು ಅವರು ಮಾಹಿತಿ ನೀಡಿದರು.

​ಸಭೆಯಲ್ಲಿ ಆಹ್ವಾನಿತರಾಗಿ ಭಾಗವಹಿಸಿದ್ದ ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ ಅವರು ಮಾತನಾಡಿ, “ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಗ್ರಾಹಕರಿಗೆ, ವಿಶೇಷವಾಗಿ ರೈತರಿಗೆ ಗೌರವದಿಂದ ಸ್ಪಂದಿಸಬೇಕು. ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಲೀನಗೊಂಡ ನಂತರ ರೈತರು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು” ಎಂದು ಒತ್ತಾಯಿಸಿದರು. ಅಲ್ಲದೆ, ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಕನ್ನಡ ಮಾತ್ರ ತಿಳಿದಿರುವ ರೈತರಿಗೆ ಸಂವಹನದಲ್ಲಿ ತೊಂದರೆಯಾಗದಂತೆ ಕನ್ನಡ ಮಾತನಾಡುವ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಕಿವಿಮಾತು ಹೇಳಿದರು.

​ಲೀಡ್ ಬ್ಯಾಂಕ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ಬಸವರಾಜ ಗಡಾದವರ ಅವರು ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ವೇದಿಕೆಯಲ್ಲಿ ಆರ್‌ಬಿಐ ಸಹಾಯಕ ಪ್ರಧಾನ ವ್ಯವಸ್ಥಾಪಕ ಅರುಣಕುಮಾರ, ನಾಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಯೂರ್ ಕಾಂಬಳೆ, ಬ್ಯಾಂಕ್ ಆಫ್ ಬರೋಡಾ ಉಪ-ಪ್ರಾದೇಶಿಕ ವ್ಯವಸ್ಥಾಪಕ ಅಮರೇಶ ಗೌಡ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರಶೇಖರ ಪಾಟೀಲ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಉಪಸ್ಥಿತರಿದ್ದರು. ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *