ರೈತರು ಹಾಗೂ ಸಣ್ಣ ಉದ್ಯಮಿಗಳಿಗೆ ಬ್ಯಾಂಕುಗಳಿಂದ ಕಿರುಕುಳ ನೀಡಬಾರದು: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಎಚ್ಚರಿಕೆ

Spread the love

ಧಾರವಾಡ: ಜಿಲ್ಲೆಯಲ್ಲಿ ಕೃಷಿ ಹಾಗೂ ಕೈಗಾರಿಕೆಗಳಿಗೆ ಪೂರಕವಾದ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಎಲ್ಲ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನ ಹಾಗೂ ಆರ್‌ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರೈತರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಜಂಟಿ ಸಭೆಯ ಸಹ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ ತಾರತಮ್ಯ ಮಾಡುತ್ತಿವೆ ಹಾಗೂ ಸರ್ಕಾರದ ಸಬ್ಸಿಡಿ ಹಣವನ್ನು ಸಾಲದ ಮೊತ್ತಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಸಹಾಯಧನದ ಹಣವನ್ನು ಯಾವುದೇ ಕಾರಣಕ್ಕೂ ಸಾಲಕ್ಕೆ ಮುರಿದುಕೊಳ್ಳಬಾರದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಬ್ಯಾಂಕುಗಳು ಸಾರ್ವಜನಿಕರಿಗೆ ನೆರವಾಗಲು ಸ್ಥಾಪಿತವಾಗಿದ್ದು, ಅಧಿಕಾರಿಗಳು ಜನಸ್ನೇಹಿಯಾಗಿ ವರ್ತಿಸಬೇಕು. ಗ್ರಾಮೀಣ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಸಾಲ ಮನ್ನಾ ನಿರೀಕ್ಷೆಯಲ್ಲಿ ಕಾಯದೇ ಸಕಾಲದಲ್ಲಿ ಸಾಲ ಮರುಪಾವತಿಸುವಂತೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ಜೊತೆಗೆ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿ (ಪಿಎಮ್‌ಇಜಿಪಿ) ಬ್ಯಾಂಕುಗಳಲ್ಲಿ ಬಾಕಿ ಇರುವ 142 ಅರ್ಜಿಗಳನ್ನು ಆದ್ಯತೆಯ ಮೇರೆಗೆ ತಕ್ಷಣ ವಿಲೇವಾರಿ ಮಾಡಬೇಕೆಂದು ಅವರು ಸೂಚಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಸಾರ್ವಜನಿಕರು ಮತ್ತು ಸಣ್ಣ ಉದ್ಯಮಿಗಳು ಸಾಲಕ್ಕಾಗಿ ಅರ್ಜಿ ಸಲ್ಲಿಸಿದಾಗ ಬ್ಯಾಂಕುಗಳು ಸಣ್ಣಪುಟ್ಟ ಕಾರಣ ನೀಡಿ ಅಲೆದಾಡಿಸದೇ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಇಲ್ಲದಿದ್ದರೆ ಸಾಲಗಾರರು ಅನಿವಾರ್ಯವಾಗಿ ಖಾಸಗಿ ಲೇವಾದೇವಿದಾರರು ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೊರೆ ಹೋಗಿ ಶೋಷಣೆಗೆ ಒಳಗಾಗುತ್ತಾರೆ ಎಂದರು.

ಉದ್ಯೋಗಿನಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಾಲ ಪಡೆಯುವ ಫಲಾನುಭವಿಗಳಿಗೆ ಸಿವಿಲ್ ಸ್ಕೋರ್ ಕಡ್ಡಾಯಗೊಳಿಸಬಾರದು ಹಾಗೂ ಸಬ್ಸಿಡಿ ಬರುವವರೆಗೆ ಕಾಯದೇ ಮಂಜೂರಾದ ಸಾಲದ ಮೊತ್ತವನ್ನು ಮೊದಲು ಬಿಡುಗಡೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಅಲ್ಲದೆ, ಕೃಷಿ ಕೋರ್ ಚಟುವಟಿಕೆಗಳಿಗೆ ಬ್ಯಾಂಕುಗಳು ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.

ಇದೇ ವೇಳೆ ನಾಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಯೂರ್ ಕಾಂಬಳೆ ಅವರು ಮಾತನಾಡಿ, ಕಳೆದ ಹಣಕಾಸು ವರ್ಷದಲ್ಲಿ ಜಿಲ್ಲೆಯ ಒಟ್ಟು ಸಾಲ ವಿತರಣೆ 11,800 ಕೋಟಿಯಿಂದ 14,800 ಕೋಟಿಗೆ ಏರಿಕೆಯಾಗಿದ್ದು, 3,000 ಕೋಟಿ ರೂ.ಗಳ ದಾಖಲೆಯ ಪ್ರಗತಿಯಾಗಿದೆ. ಇದರಲ್ಲಿ ಎಂಎಸ್ಎಂಇ ಕ್ಷೇತ್ರದಲ್ಲಿ 1,500 ಕೋಟಿ ಹಾಗೂ ಕೃಷಿ ಕ್ಷೇತ್ರದಲ್ಲಿ 1,000 ಕೋಟಿ ರೂ.ಗಳ ಹೆಚ್ಚಳವಾಗಿದೆ. ಪಿಎಂ ಸೂರ್ಯಘರ್ ಯೋಜನೆಯಿಂದಾಗಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲೂ ಉತ್ತಮ ಪ್ರಗತಿ ಕಂಡುಬಂದಿದೆ ಎಂದರು.

ಎಐಎಫ್ ಹಾಗೂ ಪಿಎಂಎಫ್‌ಎಂಇ ಯೋಜನೆಗಳು ಸೆಪ್ಟೆಂಬರ್ 30, 2026 ರವರೆಗೆ ಮಾತ್ರ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಮಂಜೂರಾತಿ ಮಾಡಬೇಕು. ಧಾರವಾಡ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ಭಾಗಗಳಲ್ಲಿ 15 ಸಾವಿರ ರೈತರನ್ನು ಒಳಗೊಂಡಂತೆ 225 ಕೋಟಿ ರೂ. ವೆಚ್ಚದಲ್ಲಿ ಐದು ವರ್ಷಗಳ ಅವಧಿಯ ‘ಸಮಗ್ರ ಕೃಷಿ ಪದ್ಧತಿ ಯೋಜನೆ’ಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಇದಕ್ಕೆ ಕೆವಿಜಿಬಿ ಬ್ಯಾಂಕಿನ 10 ಶಾಖೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಗೆ ನಬಾರ್ಡ್ ವತಿಯಿಂದ 1.5 ಲಕ್ಷ ರೂ.ವರೆಗೆ ಸಬ್ಸಿಡಿ ಸಿಗಲಿದ್ದು, ಸಂಬಂಧಪಟ್ಟ ಇಲಾಖೆಗಳು ರೈತರಲ್ಲಿ ಜಾಗೃತಿ ಮೂಡಿಸಬೇಕೆಂದು ಕೋರಿದರು.

ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ ಗಡಾದವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2025-26ನೇ ಸಾಲಿನಲ್ಲಿ ಜಿಲ್ಲೆಯ ಬ್ಯಾಂಕುಗಳು ನಿಗದಿತ 13,790.44 ಕೋಟಿ ರೂ.ಗಳ ಗುರಿಯ ವಿರುದ್ಧ 14,827.36 ಕೋಟಿ ರೂ. ಸಾಲ ವಿತರಣೆ ಮಾಡಿ ಗುರಿ ಮೀರಿ ಸಾಧನೆ ಮಾಡಿವೆ. ಪ್ರಸ್ತುತ ಸಾಲಿನಲ್ಲಿ ಆದ್ಯತಾ ವಲಯಕ್ಕೆ 16,167.83 ಕೋಟಿ ರೂ.ಗಳ ಗುರಿ ನಿಗದಿಪಡಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಸಿದ್ಧಪಡಿಸಲಾದ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಸಾಲ ಯೋಜನೆಯ ಕೈಪಿಡಿಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಭೆಯ ವೇದಿಕೆಯಲ್ಲಿ ಆರ್‌ಬಿಐ ಸಹಾಯಕ ಮಹಾಪ್ರಬಂಧಕ ಅರುಣ ಹಾಗೂ ಬ್ಯಾಂಕ್ ಆಫ್ ಬರೋಡಾದ ಸಹಾಯಕ ಮಹಾಪ್ರಬಂಧಕ ಹರ್ಷಾ ಉಪಸ್ಥಿತರಿದ್ದು, ವಿವಿಧ ಬ್ಯಾಂಕುಗಳ ಜಿಲ್ಲಾ ಮಟ್ಟದ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *