
ಬಸಾಪುರ ಶಾಲೆ ಪ್ರೌಢಶಾಲೆಯಾಗಿ ಉನ್ನತಿ: ವಿದ್ಯಾರ್ಥಿಗಳಲ್ಲಿ ಹರ್ಷದ ಸಂಭ್ರಮ
ನವಲಗುಂದ: ರಾಜ್ಯ ಸರ್ಕಾರವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 147 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದ ಬೆನ್ನಲ್ಲೇ, ಮತ್ತೆ 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಘೋಷಿಸಿ ಆದೇಶ ಹೊರಡಿಸಿದೆ. ಈ ಪೈಕಿ ನವಲಗುಂದ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕೂಡ ಪ್ರೌಢಶಾಲೆಯಾಗಿ ಮೇಲ್ದರ್ಜೆಗೇರಿದೆ.
ಬಹು ವರ್ಷಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಿದೆ.
ಇದುವರೆಗೆ ಈ ಗ್ರಾಮದ ವಿದ್ಯಾರ್ಥಿಗಳು ಪ್ರೌಢಶಾಲಾ ಶಿಕ್ಷಣಕ್ಕಾಗಿ ಅಣ್ಣಿಗೇರಿ ಅಥವಾ ನವಲಗುಂದಕ್ಕೆ ತೆರಳಬೇಕಾಗುತ್ತಿತ್ತು. ಆದರೆ ಈಗ ಗ್ರಾಮದಲ್ಲಿಯೇ 10ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆಯಬಹುದಾಗಿದೆ ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಈವರೆಗೆ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಮಾತ್ರ ಶಿಕ್ಷಣ ಲಭ್ಯವಿತ್ತು. ಇತ್ತೀಚೆಗೆ ಸರ್ಕಾರ 8ನೇ ತರಗತಿ ಆರಂಭಿಸಲು ಅನುಮತಿ ನೀಡಿತ್ತು. ಈ ಶೈಕ್ಷಣಿಕ ವರ್ಷದಿಂದ ಶಾಲೆ ಪೂರ್ಣ ಪ್ರಮಾಣದ ಪ್ರೌಢಶಾಲೆಯಾಗಿ ರೂಪಾಂತರಗೊಂಡಿದೆ.
ಸರ್ಕಾರದ ಈ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಸ್ಥಳೀಯವಾಗಿ 10ನೇ ತರಗತಿವರೆಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದೆ ಎಂಬ ನಂಬಿಕೆ ಪೋಷಕರು ವ್ಯಕ್ತಪಡಿಸಿದ್ದಾರೆ.

