ಬೆಳಗಾವಿಯಲ್ಲಿ ಭಾರೀ ಮಳೆ: 8 ತಾಲ್ಲೂಕುಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Spread the love

ಬೆಳಗಾವಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 19 ರಂದು, ಜಿಲ್ಲೆಯ ಎಂಟು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಮತ್ತು ಹುಕ್ಕೇರಿ ತಾಲ್ಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಇರಲಿದೆ ಎಂದು ತಿಳಿಸಿದ್ದಾರೆ.

ಮಳೆಯ ಪ್ರಮಾಣ ಹೆಚ್ಚಾಗಿರುವ ಕಾರಣ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ರಜೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಆದೇಶವನ್ನು ಗಮನಿಸಬೇಕೆಂದು ತಿಳಿಸಲಾಗಿದೆ.

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಶಾಲೆಗಳಿಗೆ ರಜೆ: ಡಿಸಿ ಮೀನಾ ನಾಗರಾಜ್ ಆದೇಶ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಲೆನಾಡು ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ ಮತ್ತು ಕಳಸ ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಆಗಸ್ಟ್ 19) ರಜೆ ಇರಲಿದೆ. ಇದೇ ರೀತಿ, ಚಿಕ್ಕಮಗಳೂರು ತಾಲ್ಲೂಕಿನ ಮಲೆನಾಡು ಭಾಗಕ್ಕೆ ಸೇರುವ ಆಲ್ಲೂರು, ವಸ್ತಾರೆ, ಖಾಂಡ್ಯ, ಆವತಿ, ಮತ್ತು ಜಾಗರ ಹೋಬಳಿಗಳಿಗೆ ಹಾಗೂ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ-ಲಕ್ಕವಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿ ಒಂದು ದಿನ ರಜೆ ಘೋಷಿಸಲಾಗಿದೆ.

ಪಶ್ಚಿಮ ಘಟ್ಟ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯನ ಅಬ್ಬರ ಹೆಚ್ಚಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

Leave a Reply

Your email address will not be published. Required fields are marked *