‘ಬೆಂಗಳೂರು ಗುಂಡಿಯೂರು’: ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಜೆಡಿಎಸ್ ಪ್ರತಿಭಟನೆ

Spread the love

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ‘ಗುಂಡಿಯೂರು’ ಆಗಿ ಪರಿವರ್ತಿಸಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬುಧವಾರದಂದು ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು.

​ಗೋವಿಂದರಾಜ ನಗರದ ಪೇಟೆ ಚೆನ್ನಪ್ಪ ಕೈಗಾರಿಕಾ ಪ್ರದೇಶದ ಮಾಗಡಿ ಮುಖ್ಯ ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ರಸ್ತೆಯಲ್ಲಿನ ‘ಯಮ ಗುಂಡಿಗಳಿಗೆ’ ಇತ್ತೀಚೆಗೆ ಮೂವರು ಅಮಾಯಕರು ಬಲಿಯಾಗಿದ್ದರು. ಗುಂಡಿಗಳಿಂದಾಗಿ ಸಂಭವಿಸಿದ ದುರಂತವನ್ನು ಖಂಡಿಸಿದ ಕಾರ್ಯಕರ್ತರು, ನಂತರ ಕಾಂಕ್ರೀಟ್ ಮಿಶ್ರಣ ಬಳಸಿ ಆ ಗುಂಡಿಗಳನ್ನು ಮುಚ್ಚುವ ಮೂಲಕ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

​’ಕಾಂಗ್ರೆಸ್ ಆಡಳಿತದಲ್ಲಿ ಪ್ರಾಣಕ್ಕೆ ಗ್ಯಾರಂಟಿ ಇಲ್ಲ’

​ಈ ವೇಳೆ ಮಾತನಾಡಿದ ಟಿ.ಎ. ಶರವಣ ಅವರು, ಕಾಂಗ್ರೆಸ್ ಆಡಳಿತದಲ್ಲಿ ಜನರ ಪ್ರಾಣಕ್ಕೆ ಗ್ಯಾರಂಟಿ ಇಲ್ಲವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. “ದೇಶದಲ್ಲಿ ಕೆಲವು ‘ಕಾಂಗ್ರೆಸ್ ಗಿಡಗಳು’ ಪ್ರಕೃತಿಗೆ ಹೇಗೆ ಮಾರಕವಾಗಿವೆಯೋ, ಅದೇ ರೀತಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗರಿಗೆ ಅತ್ಯಂತ ಅಪಾಯಕಾರಿಯಾಗಿದೆ. ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು ತಾಂಡವವಾಡುತ್ತಿದ್ದರೂ ಸರ್ಕಾರ ಮತ್ತು ಬಿಬಿಎಂಪಿ ನಿರ್ಲಕ್ಷ್ಯ ಮುಂದುವರಿದಿದೆ” ಎಂದು ಅವರು ಆರೋಪಿಸಿದರು.

​ರಸ್ತೆ ಗುಂಡಿಗಳಿಂದಾಗಿ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಂಡು ಬೆಂಗಳೂರು ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು.

Leave a Reply

Your email address will not be published. Required fields are marked *