
ನವದೆಹಲಿ: ಕರ್ನಾಟಕದ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದ್ದು, ಈ ರೈಲು ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿಯವರು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಸಚಿವ ಪ್ರಲ್ಹಾದ ಜೋಶಿ ಅವರು, ತಾವು ಈ ರೈಲಿಗಾಗಿ ಕೇಂದ್ರ ರೈಲ್ವೆ ಸಚಿವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದೆ ಎಂದು ತಿಳಿಸಿದ್ದಾರೆ. ಈ ಹೊಸ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗದ ಪ್ರಮುಖ ನಗರಗಳಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರದ ವಾಣಿಜ್ಯ ನಗರಿ ಮುಂಬೈಗೆ ಸಂಚರಿಸಲಿದೆ.
ಈ ಹೊಸ ರೈಲು ಸಂಚಾರದಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಕರ್ನಾಟಕ ಮತ್ತು ಮುಂಬೈ ನಡುವಿನ ವ್ಯಾಪಾರ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಮಹತ್ವದ ಯೋಜನೆಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಸಚಿವರು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು, ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರಿಗೆ ಅನಂತ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

