​ಧಾರವಾಡ: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ನಿರ್ಜನ ಪ್ರದೇಶದಲ್ಲಿ ಶವ ಪತ್ತೆ

Spread the love

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ 19 ವರ್ಷದ ಯುವತಿಯೋರ್ವಳನ್ನು ಬರ್ಬರವಾಗಿ ಹತ್ಯೆಗೈದು, ಶವವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ.

​ನಗರದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19) ಎಂಬುವವರೇ ಹತ್ಯೆಯಾದ ದುರ್ದೈವಿ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಝಕಿಯಾ, ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಕಂಗಾಲಾದ ಕುಟುಂಬಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರು. ಆದರೆ, ಇಂದು (ಬುಧವಾರ) ಮುಂಜಾನೆ ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರ ಒಡೆತನದ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ.

​ಪ್ರಾಥಮಿಕ ತನಿಖೆಯ ಪ್ರಕಾರ, ದುಷ್ಕರ್ಮಿಗಳು ಯುವತಿಯನ್ನು ಬೇರೆಡೆ ಹತ್ಯೆಗೈದು, ಬಳಿಕ ಪ್ರಕರಣವನ್ನು ಮುಚ್ಚಿಹಾಕುವ ಹಾಗೂ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ತಂದು ಇಲ್ಲಿನ ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

​ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಸುಳಿವು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ಹಾಗೂ ಹತ್ಯೆಯ ಸ್ವರೂಪದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *