ಕಳಪೆ ಕಾಮಗಾರಿಗೆ ಮಕ್ಕಳ ಜೀವ ಬಲಿ? ಬಲಕುಂದಿ ಸರ್ಕಾರಿ ಶಾಲೆಯ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ; ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ

Spread the love

ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯದ್ವಾರದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದುರ್ಘಟನೆ ಶಾಲೆಯಲ್ಲಿನ ಕಳಪೆ ಕಾಮಗಾರಿ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ನಯನಾ ಕುಮಾರಿ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಗೇಟ್ ಆಕೆಯ ಮೇಲೆ ಬಿದ್ದ ಪರಿಣಾಮ ಮೂಗಿಗೆ ತೀವ್ರ ಪೆಟ್ಟು ಬಿದ್ದಿದ್ದು, ಕಿವಿಯಿಂದಲೂ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ. ಮೊದಲಿಗೆ ಆಕೆಯನ್ನು ಇಳಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳು ಇಳಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮಸ್ಥರ ಆರೋಪದ ಪ್ರಕಾರ, ಇದೇ ಗೇಟ್ ಸುಮಾರು 15 ದಿನಗಳ ಹಿಂದೆಯೂ ಕುಸಿಯುವ ಹಂತಕ್ಕೆ ಬಂದಿದ್ದು, ಆಗ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಆದರೂ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗೇಟ್ ದುರಸ್ತಿ ಅಥವಾ ಬದಲಾವಣೆ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಗೇಟ್ ಅಪಾಯಕಾರಿಯಾಗಿದೆ ಎಂದು ಹಲವು ಬಾರಿ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದೇ ಇಂದಿನ ದುರ್ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಗಂಭೀರ ನಿರ್ಲಕ್ಷ್ಯ ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರು, ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಿ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಕಟ್ಟಡ ಮತ್ತು ಪ್ರವೇಶ ದ್ವಾರಗಳ ಸುರಕ್ಷತಾ ಪರಿಶೀಲನೆ ನಡೆಸಬೇಕು. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಗಾಯಗೊಂಡ ವಿದ್ಯಾರ್ಥಿಗಳಿಗೆ ಸರ್ಕಾರ ಸೂಕ್ತ ಪರಿಹಾರ ಹಾಗೂ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *