ಚಿರ್ತದುರ್ಗ: ಹಿರಿಯೂರು ಬಸ್ ದುರಂತ: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ; ತನಿಖೆಗೆ ಆದೇಶ

Spread the love

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

​ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಚಿಕಿತ್ಸಾ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. “ಘಟನೆಯ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡಿದ್ದೇನೆ. ಸಂತ್ರಸ್ತರ ನೆರವಿಗೆ ತಕ್ಷಣ ನಿಲ್ಲುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಈ ಭೀಕರ ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಿ, ವರದಿ ನೀಡಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

​ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿವೈಡರ್ ಹಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ 12ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. “ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

​ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪಿಎಂಎನ್‌ಆರ್‌ಎಫ್ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಇದೀಗ ರಾಜ್ಯ ಸರ್ಕಾರದಿಂದಲೂ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿರುವುದು ಸಂತ್ರಸ್ತ ಕುಟುಂಬಗಳಿಗೆ ಆಸರೆಯಾಗಲಿದೆ. ಸದ್ಯ ಗಾಯಾಳುಗಳಿಗೆ ಹಿರಿಯೂರು ಮತ್ತು ಚಿತ್ರದುರ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದಾರೆ.

Leave a Reply

Your email address will not be published. Required fields are marked *