
ಕಲಬುರಗಿ: ಪರಿಶುದ್ಧ, ಜನಪರ ಹಾಗೂ ಸಮಾನತೆಯ ಆಡಳಿತದ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೇವೆ ಮತ್ತು ನಾಗರಿಕ ಹಕ್ಕುಗಳನ್ನು ತಲುಪಿಸುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಕಲಬುರಗಿಯಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಜನಪರ, ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾವು ತಾಲೂಕು ಪಂಚಾಯಿತಿ ಅಧ್ಯಕ್ಷರ ಹಂತದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ ಆಡಳಿತದ ವಿವಿಧ ಹಂತಗಳನ್ನು ಅನುಭವಿಸಿರುವುದರಿಂದ ಆಡಳಿತ ವ್ಯವಸ್ಥೆಯ ಪ್ರತಿಯೊಂದು ಹಂತದಲ್ಲೂ ಏನು ನಡೆಯುತ್ತದೆ ಎಂಬುದು ಚೆನ್ನಾಗಿ ತಿಳಿದಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ಒಪ್ಪುವುದಿಲ್ಲ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡದಿದ್ದರೆ ಜನರ ಪರವಾಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು ಎಂದು ಸೂಚಿಸಿದ ಮುಖ್ಯಮಂತ್ರಿ, ರಾಜಕೀಯಕ್ಕಿಂತ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿನ ರಕ್ಷಣೆ ಮುಖ್ಯವಾಗಿದೆ ಎಂದರು. ಪ್ರತಿಯೊಂದು ಮನೆಗೂ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅರ್ಹ ಮತದಾರರ ಹೆಸರನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದೇಶದಾದ್ಯಂತ ಮಳೆಯ ಕೊರತೆ ಕುರಿತು ಆತಂಕ ವ್ಯಕ್ತವಾಗಿದ್ದರೂ ರಾಜ್ಯದಲ್ಲಿ ಪರಿಸ್ಥಿತಿ ಸಮಾಧಾನಕರವಾಗಿದೆ. ಬರಗಾಲ ಇರಲಿ ಅಥವಾ ಇಲ್ಲದಿರಲಿ, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರೆ ಬಹುತೇಕ ಕುಡಿಯುವ ನೀರಿನ ಸಮಸ್ಯೆಗಳು ಸ್ಥಳೀಯ ಮಟ್ಟದಲ್ಲೇ ಪರಿಹಾರವಾಗುತ್ತವೆ. ಶಾಸಕರು ಅಥವಾ ಸಚಿವರ ಸೂಚನೆಗಾಗಿ ಕಾಯದೆ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಹೇಳಿದರು.
ಕೃಷ್ಣಾ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವೂ ಸಕಾರಾತ್ಮಕ ಸ್ಪಂದನೆ ನೀಡಿದೆ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಇಟ್ಟು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಸಂಕಲ್ಪ ವ್ಯಕ್ತಪಡಿಸಿದರು.
ವಾತಾವರಣ ವೈಪರೀತ್ಯದಿಂದ ಉಷ್ಣಾಂಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.
ಸರ್ಕಾರ ನೂರು ದಿನಗಳನ್ನು ಪೂರ್ಣಗೊಳಿಸುವ ಹೊತ್ತಿಗೆ ಹಲವು ವಿನೂತನ ಹಾಗೂ ಜನಪರ ಯೋಜನೆಗಳನ್ನು ಜಾರಿಗೊಳಿಸಲು ಅಗತ್ಯ ಬ್ಲೂಪ್ರಿಂಟ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದಷ್ಟೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಯಶಸ್ವಿಯಾಗಿ ಜನರಿಗೆ ತಲುಪಲಿವೆ ಎಂದು ಹೇಳಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಈಶ್ವರ ಖಂಡ್ರೆ, ಯು.ಟಿ. ಖಾದರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸಂಸದರು, ಶಾಸಕರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

