ಮುಖ್ಯಮಂತ್ರಿ ಆಪ್ತ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Spread the love

📰 ಮುಖ್ಯಮಂತ್ರಿ ಆಪ್ತ, ಬಾಗಲಕೋಟೆ ಶಾಸಕ ಎಚ್.ವೈ. ಮೇಟಿ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿದ್ದ ಮಾಜಿ ಸಚಿವ ಹಾಗೂ ಹಾಲಿ ಬಾಗಲಕೋಟೆ ಶಾಸಕ ಎಚ್‌.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ 12.37ರ ಸುಮಾರಿಗೆ ಕೊನೆಯುಸಿರೆಳೆದರು. ಅವರು ಪತ್ನಿ, ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ. ಈ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಮೃತಪಡುವ ಸಮಯದಲ್ಲಿ ಅವರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಅಂತ್ಯಕ್ರಿಯೆಯು ಇಂದು (ಬುಧವಾರ) ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮೇಟಿ ಅವರ ಅಂತಿಮ ಸಂಸ್ಕಾರದಲ್ಲಿ ತಾವೂ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಗಣ್ಯರಿಂದ ಅಂತಿಮ ನಮನ ಮತ್ತು ಸಂತಾಪ
ಮಂಗಳವಾರ, ಎಚ್.ವೈ. ಮೇಟಿ ಅವರ ಪಾರ್ಥಿವ ಶರೀರವನ್ನು ಅವರ ಪುತ್ರಿಯ ಆರ್.ಟಿ. ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಲಕ್ಷ್ಮಿ ಹೆಬ್ಬಾಳ್, ಮೇಲ್ಮನೆ ಸದಸ್ಯ ಮಂಜುನಾಥ ಭಂಡಾರಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಸೇರಿದಂತೆ ಹಲವರು ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಬಾಗಲಕೋಟೆಗೆ ಕೊಂಡೊಯ್ಯಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಮತ್ತು ಗಣ್ಯರು ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜನತಾ ಪರಿವಾರದಿಂದ ಕಾಂಗ್ರೆಸ್‌ಗೆ: ಮೇಟಿ ರಾಜಕೀಯ ಪಯಣ
ಎಚ್.ವೈ. ಮೇಟಿ ಅವರು ಜನತಾ ಪರಿವಾರದಿಂದ ರಾಜಕೀಯದಲ್ಲಿ ಬೆಳೆದು ಬಂದ ನಾಯಕರಾಗಿದ್ದರು. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಾಪ್ತರಾಗಿದ್ದರು. ಗುಳೇದಗುಡ್ಡ ಕ್ಷೇತ್ರದಿಂದ 2 ಬಾರಿ, ಬಾಗಲಕೋಟೆ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಅವರು ಸಿಎಂ ಆಗಿದ್ದಾಗ ಅರಣ್ಯ ಸಚಿವರಾಗಿಯೂ, ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಅಬಕಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ತಮ್ಮ ಸ್ವಗ್ರಾಮ ತಿಮ್ಮಾಪುರದ ಸಹಕಾರಿ ಸಂಘದ ಅಧ್ಯಕ್ಷ ಹುದ್ದೆಯಿಂದ ರಾಜಕೀಯ ಪಯಣ ಆರಂಭಿಸಿ ಶಾಸಕ, ಸಂಸದ, ಸಚಿವರಾಗಿ ಉನ್ನತ ಸ್ಥಾನಕ್ಕೇರಿದರು. ಸಿದ್ದರಾಮಯ್ಯ ಅವರು ಜನತಾ ದಳವನ್ನು ತೊರೆದಾಗ ಅವರಿಗೆ ಸಾಥ್ ನೀಡಿ, ಅವರ ಜೊತೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

One thought on “ಮುಖ್ಯಮಂತ್ರಿ ಆಪ್ತ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Leave a Reply

Your email address will not be published. Required fields are marked *