
ಚಾಮರಾಜನಗರ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತು ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣ, ಸಂತೆ, ಜಾತ್ರೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ತಂಬಾಕು ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ವ್ಯಸನಮುಕ್ತಿಗಾಗಿ ಪುನಶ್ಚೇತನ ಶಿಬಿರಗಳನ್ನು ಆಯೋಜಿಸಬೇಕು ಎಂದರು.
ಗ್ರಾಮಮಟ್ಟದಲ್ಲಿ ವ್ಯಸನಮುಕ್ತ ಸೇವೆಗಳನ್ನು ಬಲಪಡಿಸಿ, ತಂಬಾಕು ಸೇವನೆ ಹೆಚ್ಚಿರುವ ಗ್ರಾಮಗಳಲ್ಲಿ ಸ್ತ್ರೀಶಕ್ತಿ ಸಂಘಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧದ ಫಲಕಗಳನ್ನು ಅಳವಡಿಸಬೇಕು. ಕೋಟ್ಪಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ರೂಪಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀಲಾಂಬಿಕ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
