ಡಿ.ಕೆ. ಶಿವಕುಮಾರ್ ಇಂದು ಮುಖ್ಯಮಂತ್ರಿ ಪ್ರಮಾಣವಚನ; ಜಿ. ಪರಮೇಶ್ವರ್ ಏಕೈಕ ಉಪಮುಖ್ಯಮಂತ್ರಿ

Spread the love

ದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಜೆ 4:05 ಗಂಟೆಗೆ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದತ್ತ ರಾಜ್ಯದ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.

ಇದೇ ವೇಳೆ ನೂತನ ಸಚಿವ ಸಂಪುಟದ ರಚನೆ ಕುರಿತ ಕುತೂಹಲವೂ ತಾರಕಕ್ಕೇರಿದೆ. ದೆಹಲಿಯ ಉನ್ನತ ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ರಾಜ್ಯದ ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕವಾಗಲಿದ್ದು, ಅವರಿಗೆ ಮಹತ್ವದ ಕಂದಾಯ ಖಾತೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನೂತನ ಸಚಿವ ಸಂಪುಟದ ಅಧಿಕೃತ ಪಟ್ಟಿಯ ಪ್ರಕಾರ, ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಲಿದ್ದಾರೆ. ಎಚ್.ಕೆ. ಪಾಟೀಲ್ ಅವರು ವಿಧಾನಸಭೆಯ ಸ್ಪೀಕರ್ ಆಗಿ ಜವಾಬ್ದಾರಿ ವಹಿಸಲಿದ್ದಾರೆ. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆ, ಕೆ.ಜೆ. ಜಾರ್ಜ್ ಅವರಿಗೆ ಇಂಧನ ಇಲಾಖೆ, ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಇಲಾಖೆ ಹಂಚಿಕೆ ಮಾಡಲಾಗಿದೆ.

ಕೆ.ಹೆಚ್. ಮುನಿಯಪ್ಪ ಅವರು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ, ಯು.ಟಿ. ಖಾದರ್ ಅವರು ಆರೋಗ್ಯ ಸಚಿವರಾಗಿ, ಭೈರತಿ ಸುರೇಶ್ ಅವರು ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಮಲಿಂಗಾ ರೆಡ್ಡಿ ಅವರಿಗೆ ಬೃಹತ್ ನೀರಾವರಿ ಇಲಾಖೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಇಲಾಖೆ ವಹಿಸಲಾಗಿದೆ.

ಇದಲ್ಲದೆ, ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ, ಈಶ್ವರ ಖಂಡ್ರೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಎಂ.ಬಿ. ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಹಾಗೂ ಶರಣ್ ಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದೆ.

ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ಬಳಿಕ ಸಚಿವ ಸಂಪುಟದ ವಿಸ್ತರಣೆ ಹಾಗೂ ಉಳಿದ ಖಾತೆಗಳ ಹಂಚಿಕೆ ಕುರಿತು ಹೆಚ್ಚಿನ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

ರಾಜ್ಯದ ನೂತನ ಸರ್ಕಾರದ ರಚನೆಯೊಂದಿಗೆ ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ಹೊಸ ಅಧ್ಯಾಯ ಆರಂಭವಾಗಲಿದ್ದು, ಸರ್ಕಾರದ ಮೊದಲ ನಿರ್ಧಾರಗಳು ಮತ್ತು ಸಚಿವರ ಕಾರ್ಯವೈಖರಿಯತ್ತ ಸಾರ್ವಜನಿಕರು ಹಾಗೂ ರಾಜಕೀಯ ವಲಯ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

Leave a Reply

Your email address will not be published. Required fields are marked *