ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ: ಹೈಕೋರ್ಟ್‌ನಲ್ಲಿ ಹೋರಾಟ ಮುಂದುವರಿಸಿದ ರಾಜ್ಯ ಚುನಾವಣಾ ಆಯೋಗ!

Spread the love

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುವಂತೆ ಮಾಡಲು ಕಳೆದ ನಾಲ್ಕೈದು ವರ್ಷಗಳಿಂದ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮುಂದೆ ಹೇಳಿಕೆ ನೀಡಿದೆ.

ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಸದಸ್ಯರಿಂದ ಅರ್ಜಿ
ನಗರ ಸ್ಥಳೀಯ ಸಂಸ್ಥೆಗಳ ಆಡಳಿತಾಧಿಕಾರಿಗಳ ನೇಮಕವನ್ನು ವಿರೋಧಿಸಿ 40ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಈ ಹಿಂದೆ ನೇಮಕವಾಗಿದ್ದ ಆಡಳಿತಾಧಿಕಾರಿಗಳ ಅವಧಿಯನ್ನು ತಮ್ಮ 5 ವರ್ಷದ ಅಧಿಕಾರಾವಧಿಗೆ ಪರಿಗಣಿಸಬಾರದು ಹಾಗೂ ಅವಧಿ ಮುಗಿಯಲಿರುವ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಸರ್ಕಾರ ಮುಂದಾಗದಂತೆ ನಿರ್ದೇಶನ ನೀಡಬೇಕೆಂದು ಕೋರಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಬುಧವಾರ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಈ ಅರ್ಜಿಗಳ ವಿಚಾರಣೆ ನಡೆಯಿತು.

ನ್ಯಾಯಪೀಠದ ಪ್ರಶ್ನೆ: ಆಯೋಗ ಗಮನಿಸುತ್ತಿಲ್ಲವೇ?
ವಿಚಾರಣೆ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಚಾರವಾಗಿ ಚುನಾವಣಾ ಆಯೋಗ ಗಮನ ಹರಿಸುತ್ತಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಿಗದಿತ ಅವಧಿಯಲ್ಲಿ ನಡೆಯಬೇಕು, ಅದಕ್ಕೆ ಸರ್ಕಾರವು ಅನುವು ಮಾಡಿಕೊಡಬೇಕು ಎಂದು ಕೋರಿ ಚುನಾವಣಾ ಆಯೋಗವೇ ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.

ನಾಲ್ಕು ವರ್ಷಗಳಿಂದ ನಿರಂತರ ಹೋರಾಟ
ಆಯೋಗವು ಬಿಬಿಎಂಪಿ ಚುನಾವಣೆ ವಿಚಾರವಾಗಿ 4 ವರ್ಷಗಳ ಹಿಂದೆ ಹೈಕೋರ್ಟ್ ಮೆಟ್ಟಿಲೇರಿತ್ತು ಮತ್ತು ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲೂ ಕಾನೂನು ಹೋರಾಟ ಮಾಡಲಾಗಿದೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳ ವಿಚಾರವಾಗಿ 3 ವರ್ಷಗಳ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಲಯವು ಕಾಲಕಾಲಕ್ಕೆ ಸಮಯ ನೀಡುತ್ತಲೇ ಬಂದಿದೆ. ಈ ವರ್ಷದ ಕೊನೆಗೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸುವ ಬಗ್ಗೆಯೂ ಆಯೋಗದಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ಆರಂಭವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *