ಧಾರವಾಡ, ನ. 5: 2025–26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್ ಮತ್ತು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಇಲಾಖೆಯು ಆಯೋಜಿಸಿದೆ.
ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪ್ರವೇಶ ಪರೀಕ್ಷೆಯನ್ನು ನವೆಂಬರ್ 8, 2025 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಹುಬ್ಬಳ್ಳಿ ನವನಗರದ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಯಲ್ಲಿ ನಡೆಸಲಾಗುತ್ತದೆ.
ಅದೇ ರೀತಿ, ಯುಪಿಎಸ್ಸಿ ನಾಗರೀಕ ಸೇವೆ (ಐಎಎಸ್) ಮತ್ತು ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಗಾಗಿ ಆಯೋಜಿಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನವೆಂಬರ್ 9, 2025 ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.00 ರಿಂದ 2.45 ರವರೆಗೆ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಈ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಲು ಅಗತ್ಯವಿರುವ ಪ್ರವೇಶ ಪತ್ರವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://sevasindhu.karnataka.gov.in/Minority_HallTicket_App/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ನವೆಂಬರ್ 5 ರಿಂದ ನವೆಂಬರ್ 7, 2025 ರವರೆಗೆ ಮಾತ್ರ ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅವಕಾಶವಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

