
ಧಾರವಾಡ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು. ಇಂದು ಸಂಜೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಉದ್ಯೋಗ ಮೇಳದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹತೆ ಇರುವ ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಗೂ ಸೂಕ್ತ ಕೆಲಸ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪದವಿ, ಐಟಿಐ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮೇಳದ ಕುರಿತು ವ್ಯಾಪಕ ಮಾಹಿತಿ ನೀಡಬೇಕು. ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡಲು ಸಹಾಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನೋಂದಣಿ ಮಾಡಿಕೊಳ್ಳುವಂತೆ ಪ್ರೋತ್ಸಾಹಿಸುವ ಮೂಲಕ ಈ ಬೃಹತ್ ಮೇಳವನ್ನು ಸಾರ್ಥಕಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕರೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಉದ್ಯೋಗ ಮೇಳದ ವ್ಯವಸ್ಥಿತ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಅಗತ್ಯ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ ಹಾಗೂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಉಪಸ್ಥಿತರಿದ್ದರು.
ಸಭೆಯಲ್ಲಿ ಉದ್ಯೋಗ ಮೇಳದ ಸಿದ್ಧತೆಗಳ ಕುರಿತು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾಹಿತಿ ನೀಡಿದರು. ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಸ್ವಾಗತಿಸಿದರು. ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿನೋದ ಕಂಠಿ ಕಾರ್ಯಕ್ರಮ ನಿರ್ವಹಿಸಿದರೆ, ವಿನೋದ ಗಾಮನಗಟ್ಟಿ ವಂದಿಸಿದರು. ಸಭೆಯಲ್ಲಿ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕೈಗಾರಿಕೆ, ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ತಾರಿಹಾಳ ಮತ್ತು ಬೇಲೂರು ಕೈಗಾರಿಕಾ ಪ್ರದೇಶದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

