​ಧಾರವಾಡ: ಲಂಚದ ಬೇಡಿಕೆಗೆ ಬಿ.ಎಸ್ಸಿ ವಿದ್ಯಾರ್ಥಿ ಬಲಿ; ಮೂವರು ಪೊಲೀಸರ ಅಮಾನತು

Spread the love

ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿ.ಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

​ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಸೋಮವಾರ ರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತನ ತಾಯಿ ಕವಿತಾ ಅವರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಗಾಂಜಾ ಪ್ರಕರಣವೊಂದರಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಆದಿತ್ಯನಿಗೆ ಪೊಲೀಸರು ಮಾನಸಿಕ ಕಿರುಕುಳ ನೀಡಿದ್ದರು ಎಂದು ದೂರಿದ್ದಾರೆ. ಅಷ್ಟೇ ಅಲ್ಲದೆ, ಪ್ರಕರಣದಿಂದ ಕೈಬಿಡಲು ಪೊಲೀಸರು ಆದಿತ್ಯನ ಬಳಿ 2 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಹಣದ ಬೇಡಿಕೆ ಮತ್ತು ಪೊಲೀಸರ ಕಿರುಕುಳಕ್ಕೆ ಹೆದರಿ ಆದಿತ್ಯ ತೀವ್ರ ನೊಂದಿದ್ದರು ಎನ್ನಲಾಗಿದೆ.

​ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಚಂದ್ರು ನಡುವಿನಮನಿ, ಕಿರಣ ಡೊಕ್ಕನ್ನವರ ಹಾಗೂ ಕಾನ್‌ಸ್ಟೆಬಲ್ ಸಯ್ಯದ್ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

​ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಡಿಸಿಪಿ ಶ್ರುತಿ ಅವರ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಸಮಿತಿಯು ಸಮಗ್ರ ವರದಿ ಸಲ್ಲಿಸಲಿದೆ. “ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಅಥವಾ ಸಾರ್ವಜನಿಕರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಕಮಿಷನರ್ ಭರವಸೆ ನೀಡಿದ್ದಾರೆ. ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯ ಸಾವು ಕುಟುಂಬಸ್ಥರಲ್ಲಿ ಆಕ್ರೋಶ ಮೂಡಿಸಿದ್ದು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *