ಧಾರವಾಡ: ಏಪ್ರಿಲ್ 23 ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಅಭಿಯಾನ

Spread the love

ಧಾರವಾಡ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ದನ ಹಾಗೂ ಎಮ್ಮೆಗಳಿಗೆ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಂಬತ್ತನೇ ಸುತ್ತಿನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

​ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆ ಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ ಸುಮಾರು 1,36,865 ದನಗಳು ಹಾಗೂ 47,172 ಎಮ್ಮೆಗಳನ್ನು ಲಸಿಕಾಕರಣಕ್ಕೆ ಒಳಪಡಿಸುವ ಗುರಿ ಹೊಂದಲಾಗಿದೆ. ಈ ಬೃಹತ್ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 116 ಲಸಿಕಾ ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡದಲ್ಲಿ ಒಬ್ಬ ಮೇಲ್ವಿಚಾರಕರು ಹಾಗೂ ಇಬ್ಬರು ಲಸಿಕೆದಾರರು ಕಾರ್ಯನಿರ್ವಹಿಸಲಿದ್ದಾರೆ. ವ್ಯವಸ್ಥಿತವಾಗಿ ಲಸಿಕೆ ನೀಡಲು ಜಿಲ್ಲೆಯನ್ನು 1854 ಬ್ಲಾಕ್‌ಗಳನ್ನಾಗಿ ವಿಂಗಡಿಸಲಾಗಿದ್ದು, ಅಭಿಯಾನದ ಅವಧಿಯಲ್ಲಿ ಯಾವುದೇ ಜಾನುವಾರು ಲಸಿಕೆಯಿಂದ ವಂಚಿತವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

​2030ರ ವೇಳೆಗೆ ದೇಶವನ್ನು ಕಾಲುಬಾಯಿ ಬೇನೆ ಮುಕ್ತಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಜಾನುವಾರುಗಳು ಆರೋಗ್ಯವಾಗಿದ್ದಲ್ಲಿ ಮಾತ್ರ ಉತ್ಪನ್ನಗಳ ಪ್ರಮಾಣ ಹೆಚ್ಚಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು. ಲಸಿಕಾ ಅಭಿಯಾನದ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

​ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎಸ್.ವಿ. ಸಂತಿ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರು ಹಾಗೂ ಧಾರವಾಡ ಹಾಲು ಒಕ್ಕೂಟದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *