ಧಾರವಾಡ:ಅಂತರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Spread the love

ಧಾರವಾಡ, ಜೂ. 29: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಹಾಗೂ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ, ಮಾದಕ ವಸ್ತುಗಳ ಸೇವನೆ, ಸಾಗಣೆ ಹಾಗೂ ಅವುಗಳನ್ನು ಬೆಳೆಸುವುದಕ್ಕೆ ಸಂಬಂಧಿಸಿದ ಕಾನೂನು ಶಿಕ್ಷೆ ಮತ್ತು ದಂಡದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರೈತರು ತಮ್ಮ ಹೊಲಗಳಲ್ಲಿ ಮಾದಕ ವಸ್ತುಗಳನ್ನು ಬೆಳೆಸುವುದು ಕಾನೂನಾತ್ಮಕ ಅಪರಾಧವಾಗಿದ್ದು, ಈ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು. ಅಲ್ಲದೆ, ಸುತ್ತಮುತ್ತ ಮಾದಕ ವ್ಯಸನಿಗಳಿದ್ದರೆ ಅವರನ್ನು ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಬೇಕು ಹಾಗೂ ವಿದ್ಯಾರ್ಥಿಗಳು ಪೋಕ್ಸೊ ಕಾಯ್ದೆಯ ಬಗ್ಗೆ ಸಮಗ್ರ ಅರಿವು ಹೊಂದಿರಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಉಪ ನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಸವಿತಾ ಎಸ್. ನಂದಿಕೇಶ್ವರ ಮಾತನಾಡಿ, ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ಮಾನಸಿಕ ಖಿನ್ನತೆಗೆ ಒಳಗಾಗಿ ತಮ್ಮ ವ್ಯಕ್ತಿತ್ವ ಹಾಗೂ ಶೈಕ್ಷಣಿಕ ಗುರಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ. ಇದರಿಂದ ಕುಟುಂಬಕ್ಕೂ ತೊಂದರೆ ಉಂಟಾಗುವುದರಿಂದ ಪ್ರತಿಯೊಬ್ಬರೂ ಜಾಗೃತರಾಗಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು. ಬದಲಾವಣೆ ನಮ್ಮಿಂದಲೇ ಆರಂಭವಾಗಲಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮೋಹನಕುಮಾರ ಥಂಬದ ಹಾಗೂ ಡಾ. ಅಶೋಕ ಕೋರಿ ಭಾಗವಹಿಸಿ ಮಾಹಿತಿ ನೀಡಿದರು.

ಆಂಥೊನಿ ವಿಜಯಕುಮಾರ ಪ್ರಾರ್ಥಿಸಿದರು. ಸಲಿಮ್ ಜಕ್ಕಲಿ ಸ್ವಾಗತಿಸಿದರು. ಜಾವೇದ್ ಮೂಡಿ ವಂದಿಸಿದರು. ಲಕ್ಷ್ಮಿಛಾಯಾ ಕಾರ್ಯಕ್ರಮ ನಿರೂಪಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *