ಧಾರವಾಡ: ಗುಡಿ ಕೈಗಾರಿಕೆ ಮತ್ತು ಕರಕುಶಲ ವಸ್ತು ಪ್ರದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ

Spread the love

ಧಾರವಾಡ: ಜಿಲ್ಲಾ ಪಂಚಾಯತ್‌ನ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ವತಿಯಿಂದ 2025-26ನೇ ಸಾಲಿನ ವಸ್ತುಪ್ರದರ್ಶನ ಯೋಜನೆಯಡಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಕುಶಲಕರ್ಮಿಗಳ ಹಾಗೂ ಗುಡಿ ಕೈಗಾರಿಕೆಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಮೈದಾನದಲ್ಲಿ ಫೆಬ್ರವರಿ 28ರವರೆಗೆ ನಡೆಯಲಿರುವ ಈ ಮೇಳವನ್ನು ಉದ್ಘಾಟಿಸಿದ ಸಚಿವರು, ಮಳಿಗೆಗಳಿಗೆ ಭೇಟಿ ನೀಡಿ ಕುಶಲಕರ್ಮಿಗಳೊಂದಿಗೆ ಸಂವಾದ ನಡೆಸಿದರು.

​ಪ್ರದರ್ಶನದಲ್ಲಿ ಭಾಗವಹಿಸಿದ್ದ ಗುಡಿ ಕೈಗಾರಿಕೆದಾರರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ಮಾತನಾಡಿದ ಸಚಿವರು, ವಸ್ತುಗಳ ತಯಾರಿಕೆ, ಕಚ್ಚಾ ಸಾಮಗ್ರಿಗಳ ಲಭ್ಯತೆ ಮತ್ತು ದೈನಂದಿನ ಉತ್ಪಾದನೆ ಹಾಗೂ ಮಾರುಕಟ್ಟೆಯ ಸ್ಥಿತಿಗತಿಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆದರು. ಒಟ್ಟು 32 ಮಳಿಗೆಗಳಲ್ಲಿ ಕೈಗಾರಿಕಾ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಆಹಾರ ಪದಾರ್ಥಗಳು ಹಾಗೂ ಆಕರ್ಷಕ ಹಸ್ತಕಲಾ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಚಿವರು ತಮಗೆ ಇಷ್ಟವಾದ ಕೆಲವು ವಸ್ತುಗಳನ್ನು ಸ್ವತಃ ಖರೀದಿಸುವ ಮೂಲಕ ಸ್ಥಳೀಯ ಕಲಾವಿದರು ಹಾಗೂ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಣ್ಣ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಲು ಮತ್ತು ಆರ್ಥಿಕವಾಗಿ ಸದೃಢರಾಗಲು ಇಂತಹ ಮೇಳಗಳು ಉತ್ತಮ ವೇದಿಕೆಯಾಗಿವೆ ಎಂದರು.

​ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ ಉಪಸ್ಥಿತರಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎನ್.ಆರ್.ಎಲ್.ಎಂ ಮತ್ತು ಸಂಜೀವಿನಿ ಒಕ್ಕೂಟದ ಸ್ತ್ರೀ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *