
ಧಾರವಾಡ ಮಾ.11: ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಮತ್ತು ಕಚೇರಿಗೆ ಸ್ವೀಕೃತವಾಗುವ ದೂರಗಳನ್ನು ಇತ್ಯರ್ಥಗೊಳಿಸಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತದಲ್ಲಿ ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಕ್ಕೆ 0836-2742221 ಗೆ ಸಾರ್ವಜನಿಕರು ಕರೆ ಮಾಡಿ ಸಂಪರ್ಕಿಸಬಹುದು. ಧಾರವಾಡ ಜಿಲ್ಲಾ ಪಂಚಾಯತ ಕಚೇರಿಗೆ ಸ್ವೀಕೃತವಾಗುವ ದೂರುಗಳನ್ನು ಪರಿಶೀಲಿಸಿ, ಇತ್ಯರ್ಥಪಡಿಸಲು ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಹಾಯವಾಣಿ ಕೇಂದ್ರಕ್ಕೆ ಸೋಮವಾರದಿಂದ ರವಿವಾರದವರೆಗೆ ವಾರದ ಏಳು ದಿನ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ ಅಜಯ ಎನ್. ಅವರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ತಕ್ಷಣ ಸ್ಪಂದಿಸಲು ಎಲ್ಲ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಮತ್ತು ತಾಲೂಕಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಆದೇಶಿಸಲಾಗಿದೆ.
ಆದ್ದರಿಂದ ಸಾರ್ವಜನಿಕರು ಕುಡಿಯುವ ನೀರು ಹಾಗೂ ಇತರ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಪಂಚಾಯತ ಅಥವಾ ತಾಲೂಕಾ ಪಂಚಾಯತ ಕಚೇರಿಗಳಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಿ, ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

