ಬೆಳೆ, ಕೃಷಿ ಸಂಬಂಧಿತ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡದಂತೆ ಜಿಲ್ಲಾಧಿಕಾರಿ ಶ್ರೀ ರೂಪ ಸೂಚನೆ

Spread the love

ಚಾಮರಾಜನಗರ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಬೆಳೆ ಸಾಲ ಹಾಗೂ ಕೃಷಿ ಸಂಬಂಧಿತ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲವು ಸಹಕಾರ ಬ್ಯಾಂಕುಗಳಲ್ಲಿ ಸಾಲ ಮರುಪಾವತಿಸುವಂತೆ ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ರೈತ ಮುಖಂಡರು ಸಭೆಯಲ್ಲಿ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲಗಳು ಹಾಗೂ ಕೃಷಿ ಆಧಾರಿತ ಸಾಲಗಳ ಮರುಪಾವತಿಯನ್ನು 12 ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೀಗಾಗಿ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡಬಾರದು ಎಂದು ಸ್ಪಷ್ಟಪಡಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಬೇಕು. ರೈತರಿಗೆ ಸಾಲ ಮರುಪಾವತಿಸುವಂತೆ ಒತ್ತಾಯಿಸದ ರೀತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಚಂಗಡಿ ಗ್ರಾಮ ಸ್ಥಳಾಂತರಕ್ಕೆ ಪ್ರತ್ಯೇಕ ಸಭೆ

ಚಂಗಡಿ ಗ್ರಾಮ ಸ್ಥಳಾಂತರದ ಕುರಿತು ಮಾತನಾಡಿದ ರೈತ ಮುಖಂಡ ಕರಿಯಪ್ಪ ಅವರು, 2020ರಲ್ಲೇ ಗ್ರಾಮ ಸ್ಥಳಾಂತರ ಘೋಷಣೆಯಾಗಿದ್ದರೂ ಈವರೆಗೆ ಅದು ಕಾರ್ಯರೂಪಕ್ಕೆ ಬಂದಿಲ್ಲ. ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯೂ ಇದೆ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಮುಂದಿನ ವಾರವೇ ಚಂಗಡಿ ಗ್ರಾಮದ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ಕರೆಯಲಾಗುವುದು. ಸಭೆಯಲ್ಲಿ ಹಿರಿಯ ಅರಣ್ಯ ಅಧಿಕಾರಿಗಳು ಭಾಗವಹಿಸಲಿದ್ದು, ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾಡಂಚಿನ ಗ್ರಾಮಗಳಲ್ಲಿ ವಿದ್ಯುತ್ ಕಾಮಗಾರಿ ತ್ವರಿತಗೊಳಿಸಲು ಸೂಚನೆ

ಕಾಡಂಚಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ವಿಳಂಬವಾಗುತ್ತಿವೆ ಎಂಬ ರೈತರ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಈಗಾಗಲೇ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಕಾಡುಪ್ರಾಣಿಗಳ ಹಾವಳಿಯಿಂದ ಗ್ರಾಮೀಣ ಪ್ರದೇಶದ ಜನರು ಸಂಕಷ್ಟ ಅನುಭವಿಸುತ್ತಿದ್ದು, ಚಿರತೆ ಹಾಗೂ ಹುಲಿಗಳನ್ನು ಸೆರೆಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ವಿಳಂಬ ಮಾಡಲಾಗುತ್ತಿದೆ ಎಂದು ರೈತ ಮುಖಂಡರು ದೂರಿದರು. ಈ ಹಿನ್ನೆಲೆಯಲ್ಲಿ ಸಭೆಯಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಸಭೆಯಲ್ಲಿ ಜಮೀನಿನ ಖಾತೆ ಬದಲಾವಣೆ, ಒತ್ತುವರಿ ತೆರವು, ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಸಮಸ್ಯೆಗಳು, ಕಾಡುಪ್ರಾಣಿಗಳ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ಬಗರ್ ಹುಕುಂ ಸಾಗುವಳಿ, ಕಾಡುಪ್ರಾಣಿಗಳಿಂದ ಬೆಳೆ ಹಾನಿಯಾದಾಗ ವೈಜ್ಞಾನಿಕವಾಗಿ ಪರಿಹಾರ ನೀಡುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ರೈತ ಮುಖಂಡರಾದ ಬಂದಿಗೌಡನಹಳ್ಳಿ ನಟರಾಜ್, ಚಂಗಡಿ ಕರಿಯಪ್ಪ, ಪೃಥ್ವಿ ಸೇರಿದಂತೆ ರೈತ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಭಾನುಪ್ರಕಾಶ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್, ತಹಶೀಲ್ದಾರರಾದ ತನ್ಮಯ್, ಚೈತ್ರ, ನಯನ, ಡಿವೈಎಸ್‌ಪಿ ಸ್ನೇಹರಾಜ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್, ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *