ದೀಪಾವಳಿ ಜೂಜಾಟಕ್ಕೆ ಪೊಲೀಸರ ಭರ್ಜರಿ ಬ್ರೇಕ್: ಹುಬ್ಬಳ್ಳಿ-ಧಾರವಾಡದಲ್ಲಿ 14 ಪ್ರಕರಣ ದಾಖಲು, 91 ಜೂಜುಕೋರರ ವಿರುದ್ಧ ಕ್ರಮ!

Spread the love

ದೀಪಾವಳಿ ಜೂಜಾಟಕ್ಕೆ ಪೊಲೀಸರ ಭರ್ಜರಿ ಬ್ರೇಕ್: ಹುಬ್ಬಳ್ಳಿ-ಧಾರವಾಡದಲ್ಲಿ 14 ಪ್ರಕರಣ ದಾಖಲು, 91 ಜೂಜುಕೋರರ ವಿರುದ್ಧ ಕ್ರಮ!

ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಒಟ್ಟು 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಈ ಕಾರ್ಯಾಚರಣೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ 91 ಜನರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಮಾಹಿತಿ ನೀಡಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟ ಹೆಚ್ಚಾಗುವ ಸಾಧ್ಯತೆಯನ್ನು ಮನಗಂಡ ಪೊಲೀಸ್ ಕಮಿಷನರ್ ಅವರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು. ಅದರಂತೆ ಹುಬ್ಬಳ್ಳಿಯ ಎಪಿಎಂಸಿ-ನವನಗರ, ಕೇಶ್ವಾಪುರ, ಹಳೇಹುಬ್ಬಳ್ಳಿ, ಹುಬ್ಬಳ್ಳಿ ಉಪನಗರ, ಹುಬ್ಬಳ್ಳಿ ಶಹರ ಹಾಗೂ ಧಾರವಾಡದ ಶಹರ ಮತ್ತು ವಿದ್ಯಾಗಿರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಎಪಿಎಂಸಿ-ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ 34 ಜನರನ್ನು, ಕೇಶ್ವಾಪುರದಲ್ಲಿ ಐವರನ್ನು, ಹಳೇಹುಬ್ಬಳ್ಳಿಯಲ್ಲಿ ಎರಡು ಪ್ರಕರಣಗಳಲ್ಲಿ ಒಂಬತ್ತು ಜನರನ್ನು ಹಾಗೂ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 12 ಜನರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ 12 ಜನರನ್ನು, ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ ಹತ್ತು ಜನರನ್ನು ಹಾಗೂ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಬ್ಬದ ಸಂಭ್ರಮದ ಹೆಸರಿನಲ್ಲಿ ಕಾನೂನುಬಾಹಿರ ಜೂಜಾಟ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರು ಇಂತಹ ಚಟುವಟಿಕೆಗಳಿಂದ ದೂರವಿರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಅವಳಿ ನಗರದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯ ಮೂಲಕ ಜೂಜಾಟದ ಅಡ್ಡೆಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

Leave a Reply

Your email address will not be published. Required fields are marked *