ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ? ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಚರ್ಚೆ

Spread the love

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದೊಂದು ವರ್ಷದಿಂದ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರಕ್ಕೆ ಅಂತಿಮ ರೂಪ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಜೊತೆಗೆ ದೆಹಲಿಯಲ್ಲಿ ಪ್ರಮುಖ ರಾಷ್ಟ್ರೀಯ ಜವಾಬ್ದಾರಿ ವಹಿಸುವಂತೆ ಪಕ್ಷದ ನಾಯಕತ್ವ ಮನವಿ ಮಾಡಿದೆ ಎನ್ನಲಾಗಿದೆ. ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಅವರು ಸಮಯ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಹೈಕಮಾಂಡ್‌ನ ನಿರ್ಧಾರಗಳಿಗೆ ಬದ್ಧರಾಗಿರುವುದಾಗಿ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಚರ್ಚೆಯ ವೇಳೆ ತಿಳಿಸಿದ್ದಾರೆ ಎನ್ನಲಾಗಿದ್ದು, ಬುಧವಾರದೊಳಗೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ.

ಇದೇ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸುಮಾರು ಆರು ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಿದೆ. ಆದರೆ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಹಾಗೂ ಎಂಎಲ್‌ಸಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಮಾತ್ರ ಚರ್ಚೆ ನಡೆದಿದೆ. ಇತರೆ ಊಹಾಪೋಹಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನೊಂದೆಡೆ, ಸಾಮಾಜಿಕ ನ್ಯಾಯ ಹಾಗೂ ಜಾತಿ ಜನಗಣತಿ ವಿಚಾರಗಳನ್ನು ದೇಶಾದ್ಯಂತ ಪ್ರಚಾರಗೊಳಿಸುತ್ತಿರುವ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರಂತಹ ಪ್ರಮುಖ ಒಬಿಸಿ ನಾಯಕ ರಾಷ್ಟ್ರೀಯ ಮಟ್ಟದಲ್ಲಿ ಅಗತ್ಯವಿದೆ ಎಂದು ಪಕ್ಷದ ನಾಯಕತ್ವ ಅಭಿಪ್ರಾಯಪಟ್ಟಿದೆ ಎನ್ನಲಾಗಿದೆ. 2029ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಪಾತ್ರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *