ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

Spread the love

ನವದೆಹಲಿ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರಪತಿಗಳು ವಿವಿಧ ರಾಜ್ಯಗಳ ರಾಜ್ಯಪಾಲರ ನೇಮಕ ಹಾಗೂ ವರ್ಗಾವಣೆ ಮಾಡಿದ್ದು, ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಒಡಿಶಾ ರಾಜ್ಯಪಾಲರಾಗಿ ಬ್ರಜ್ ಮೋಹನ್ ರಾಮ್, ಉತ್ತರಾಖಂಡ ರಾಜ್ಯಪಾಲರಾಗಿ ಡಾ. ಧಲ್ ಸಿಂಗ್ ಬಿಸೇನ್ ಹಾಗೂ ಸಿಕ್ಕಿಂ ರಾಜ್ಯಪಾಲರಾಗಿ ದುಷ್ಯಂತ್ ಗೌತಮ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನೇಮಕಾತಿಗಳಿಗೆ ಅನುಮೋದನೆ ನೀಡಿದ್ದಾರೆ.

ಡಾ. ಸುಧಾ ಯಾದವ್ ಯಾರು?

ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಡಾ. ಸುಧಾ ಯಾದವ್ ಅವರು ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, 13ನೇ ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

2015ರ ಜುಲೈ 3ರಂದು ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಸುಧಾ ಯಾದವ್ ಅವರು, 2019ರಿಂದ 2022ರವರೆಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

2022ರ ಆಗಸ್ಟ್ 17ರಂದು ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸದೀಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದರು. ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬಳಿಕ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೂ ಸುಧಾ ಯಾದವ್ ಪಾತ್ರರಾಗಿದ್ದಾರೆ.

ರಾಜಕೀಯ ಮತ್ತು ಸಾಂಸ್ಥಿಕ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಡಾ. ಸುಧಾ ಯಾದವ್ ಅವರ ನೇಮಕದಿಂದ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *