​ಭೂಮಿ ಜೀವದ ತೊಟ್ಟಿಲು, ಅದನ್ನು ಬಂಜೆ ಮಾಡಬಾರದು: ಮಣ್ಣಿನ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Spread the love

ಬೆಳಗಾವಿ: “ಭೂಮಿಯು ಜೀವದ ತೊಟ್ಟಿಲಾಗಿದ್ದು, ಅತಿಯಾದ ರಸಗೊಬ್ಬರ ಬಳಕೆಯ ಮೂಲಕ ಅಂತಹ ಪವಿತ್ರ ಭೂಮಿಯನ್ನು ಬಂಜೆ ಮಾಡಬಾರದು. ಕೃಷಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ರೈತರು ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

​ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಮಾಡುವ ನೂತನ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ರೈತ ಪರವಾಗಿದ್ದು, ಕೃಷಿಯನ್ನು ಲಾಭದಾಯಕವಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಸದಾ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಐದು ಜಿಲ್ಲೆಗಳ ಒಟ್ಟು 3,000 ಹೆಕ್ಟೇರ್ ಪ್ರದೇಶದಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ಸಮತೋಲನ ಪೋಷಕಾಂಶ ನಿರ್ವಹಣೆಯ ಈ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

​ಹೆಚ್ಚಿನ ಇಳುವರಿಯ ಆಸೆಯಿಂದ ರೈತರು ಅತಿಯಾಗಿ ರಸಗೊಬ್ಬರ ಬಳಸುವ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಯವರು, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನೇರವಾಗಿ ಕ್ಷೇತ್ರಗಳಿಗೆ ಭೇಟಿ ನೀಡಿ ಹೊಸ ತಳಿಗಳು ಹಾಗೂ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ತಂತ್ರಜ್ಞಾನದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಮಂಡ್ಯ ಜಿಲ್ಲೆಯ ರೈತರು ಕೃಷಿ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಪರ ಕೃಷಿ ಮಾಡುತ್ತಿರುವುದನ್ನು ಉದಾಹರಿಸಿದ ಅವರು, ರಾಜ್ಯದ ಇತರ ಭಾಗದ ರೈತರು ಸಹ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸರ್ಕಾರ ಸಬ್ಸಿಡಿ ಮೂಲಕ ನೀಡುವ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು ಎಂದರು. ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಶೇಕಡಾ 90 ರಷ್ಟು ಕೃಷಿಯನ್ನೇ ಅವಲಂಬಿಸಿರುವುದರಿಂದ ರೈತರಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದರು

ಈ ಸಮಯದಲ್ಲಿ ಸಚಿವರಾದ ಎನ್.ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಈ ವೇಳೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *