
ಹನೂರು: ಶಿಕ್ಷಣದಿಂದ ಮಾತ್ರ ಪ್ರತಿಯೊಂದು ಸಮಾಜವೂ ಪ್ರಗತಿ ಹೊಂದಲು ಸಾಧ್ಯ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಗಾಣಮಂಗಲದಲ್ಲಿ ಸುಮಾರು 3.82 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಹಿಂದೆ ಮಕ್ಕಳು ಶಿಥಿಲಗೊಂಡ ಕಟ್ಟಡಗಳಲ್ಲಿ ಪಾಠ ಕೇಳಬೇಕಾದ ಅನಿವಾರ್ಯತೆ ಇತ್ತು. ಈ ಸಮಸ್ಯೆ ಮನಗಂಡು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಈ ನೂತನ ಶಾಲೆಯು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ದಾರಿ ತೋರಿಸುವ ಜ್ಞಾನ ದೇಗುಲವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಮತಿ ಬಿಂದ್ಯಾ ಮಾತನಾಡಿ, 1969ರಲ್ಲಿ ಕೇವಲ 30 ಮಕ್ಕಳೊಂದಿಗೆ 9 ಕೊಠಡಿಗಳಲ್ಲಿ ಆರಂಭವಾಗಿದ್ದ ಈ ವಸತಿ ಶಾಲೆ ಇಂದು ಮಹತ್ವದ ಹಂತಕ್ಕೆ ತಲುಪಿದೆ. ಪ್ರಸ್ತುತ ಇಲ್ಲಿ 68 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸುಮಾರು 23 ತಿಂಗಳ ಅವಧಿಯಲ್ಲಿ 3 ಕೋಟಿ 80 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಅಲ್ಲದೆ ಎಂಟನೇ ತರಗತಿಯವರೆಗೆ ಪಾಠ ಮುಂದುವರಿಸಲು ಅನುಮತಿ ದೊರೆತಿದ್ದು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದರು.

ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕ ವೆಂಕಟಾಚಲ ಅವರಿಗೆ ಶಾಸಕರು, ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ರಂಗಮ್ಮ, ಉಪಾಧ್ಯಕ್ಷೆ ಮಹದೇವಮ್ಮ, ಕೆಆರ್‌ಐಡಿಎಲ್ ಎಇಇ ಪಂಪಾಪತಿ, ಎಇ ತನುಜ್ ಕುಮಾರ್, ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ ಮಾದೇಗೌಡ, ತಾಲೂಕು ಆರೋಗ್ಯಾಧಿಕಾರಿ ಪ್ರಕಾಶ್, ಜಿ.ಪಂ ಮಾಜಿ ಸದಸ್ಯರಾದ ಶ್ಯಾಗ್ಯ ರವಿ, ಬಾಬು, ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ, ಪಿಡಿಒ ಸಿದ್ದಪ್ಪ ಹಾಗೂ ಗ್ರಾಮದ ಮುಖಂಡರಾದ ಮುತ್ತಯ್ಯ, ಮಹಾದೇವಸ್ವಾಮಿ, ಕರಿಯಪ್ಪ, ಈರಯ್ಯ ಸೇರಿದಂತೆ ಹಲವರು ಹಾಜರಿದ್ದರು.

