
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಸೆಪ್ಟೆಂಬರ್ 22ರಿಂದ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಚುನಾವಣಾಧಿಕಾರಿಗಳು ಸೆಪ್ಟೆಂಬರ್ 29ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದೆ.
ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದ್ದು, ಅಕ್ಟೋಬರ್ 31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

