ಪ್ರತಿ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

Spread the love

ಧಾರವಾಡ, ಜೂ.12: 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗಕ್ಕೆ ನೇಮಿಸುವುದು ಕಾನೂನುಬಾಹಿರವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಗುರುವಾರ ಧಾರವಾಡದ ರಾಮನಗರದಲ್ಲಿರುವ ಆದರ್ಶ ಬಾಲಿಕಾ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಯಾದ ಬಳಿಕ 14 ವರ್ಷದೊಳಗಿನ ಮಕ್ಕಳನ್ನು ಹೋಟೆಲ್, ಗ್ಯಾರೇಜ್ ಸೇರಿದಂತೆ ಯಾವುದೇ ಕೆಲಸಕ್ಕೆ ನೇಮಿಸಬಾರದು. ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಶಾಲೆಗಳಲ್ಲಿ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಹಾಲು ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಈ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದು ಅವರು ಹೇಳಿದರು.

ಮಕ್ಕಳು ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಶಿಕ್ಷಣದ ಮೂಲಕ ಜ್ಞಾನ ಹಾಗೂ ಕೌಶಲ್ಯಗಳನ್ನು ಸಂಪಾದಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಅವಕಾಶಗಳನ್ನು ಪಡೆದುಕೊಳ್ಳಬಹುದು ಎಂದು ಗೀತಾ ಸಿ.ಡಿ. ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ದುಡಿಮೆಗೆ ತೊಡಗಿಸಬಾರದು. ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕಿದ್ದು, ಪೋಷಕರು ಹಾಗೂ ಸಮಾಜ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಮಕ್ಕಳು ದೇಶದ ಅಭಿವೃದ್ಧಿಯ ಪಥಪ್ರದರ್ಶಕರಾಗಿದ್ದು, ಅವರಿಗೆ ಉತ್ತಮ ಶಿಕ್ಷಣ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಎಲ್ಲಿಯಾದರೂ ಬಾಲಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಮಕ್ಕಳ ರಕ್ಷಣೆಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಭಾರತೀಯ ಶಿಕ್ಷಣ ಪ್ರಸಾರ ಸಮಿತಿ ಅಧ್ಯಕ್ಷ ವಿಜಯಾನಂದ ಶೆಟ್ಟಿ ಮಾತನಾಡಿ, ಮಕ್ಕಳು ದೇಶದ ಭವಿಷ್ಯವಾಗಿದ್ದು ಅವರಿಗೆ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷತೆಯನ್ನು ಒದಗಿಸಬೇಕು. ಬಡತನ ಮತ್ತು ಇತರ ಕಾರಣಗಳಿಂದ ಕೆಲವು ಮಕ್ಕಳು ಶಾಲೆಯಿಂದ ದೂರವಾಗಿ ದುಡಿಮೆಯಲ್ಲಿ ತೊಡಗುತ್ತಿದ್ದಾರೆ. ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ಬೇಕು ಎಂಬ ಮನೋಭಾವವನ್ನು ಸಮಾಜದಲ್ಲಿ ಬೆಳೆಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬಸಾಬ ಮುಲ್ಲಾ ಸ್ವಾಗತಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಸಿ. ಪಂಚಾಕ್ಷರಿಮಠ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಅಕ್ರಮ್ ಅಲ್ಲಾಪುರ ವಂದಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ವೈ. ಪಾಟೀಲ, ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವಾಯ್. ಹಳೇಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ತಿಮ್ಮಾಪೂರ, ಪೊಲೀಸ್ ಅಧಿಕಾರಿ ರಾಮನ ಗೌಡ್ರು, ಕಿಡ್ಸ್ ಸಂಸ್ಥೆ ಕಾರ್ಯದರ್ಶಿ ಅಶೋಕ ಯರಗಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾವನ್ನೂ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಜಾಥಾಕ್ಕೆ ಚಾಲನೆ ನೀಡಿದರು. ಆದರ್ಶ ಬಾಲಿಕಾ ಪ್ರೌಢಶಾಲೆಯಿಂದ ಆರಂಭವಾದ ಜಾಥಾ ಲೈನ್ ಬಜಾರ್, ಸಂಗಮ ಸರ್ಕಲ್ ಮಾರ್ಗವಾಗಿ ಎನ್‌ಟಿಟಿಎಫ್ ವರೆಗೆ ಸಂಚರಿಸಿತು. ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *