
ಧಾರವಾಡ, ಅ. 29: ಮಾದಕ ವಸ್ತುಗಳ ವ್ಯಸನಕ್ಕೆ ಒಮ್ಮೆ ಬಲಿಯಾದರೆ, ಕ್ರಮೇಣ ಅದರ ಸೇವನೆಯ ಪ್ರಮಾಣ ಹೆಚ್ಚಾಗಿ ವ್ಯಕ್ತಿಯ ಜೀವನವೇ ಹಾಳಾಗುವ ಅಪಾಯವಿದೆ. ಆದ್ದರಿಂದ ಮಕ್ಕಳು, ಯುವಕರು ಹಾಗೂ ಸಾರ್ವಜನಿಕರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ತಡೆಯಲು ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ, ರೇಬಿಸ್ ನಿಯಂತ್ರಣ, ಹಾವು ಕಡಿತ ತಡೆಗಟ್ಟುವಿಕೆ ಮತ್ತು ಕ್ಷಯರೋಗ ನಿರ್ಮೂಲನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು ಮಾದಕ ವಸ್ತುಗಳಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದರೂ ಅದನ್ನು ನಿರ್ಲಕ್ಷಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ನಮ್ಮ ಮಕ್ಕಳ ಸುರಕ್ಷತೆಯಷ್ಟೇ ಇತರ ಮಕ್ಕಳ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕು. ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಗಮನಿಸಿ ಅವುಗಳನ್ನು ತಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ತಿಳಿಸಿದರು.
ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಸೌಲಭ್ಯ ಹಾಗೂ ಪ್ರೀತಿಯನ್ನು ನೀಡಿದರೂ, ಹೊರಗಿನ ಪರಿಸರದಲ್ಲಿ ಮಾದಕ ವಸ್ತುಗಳ ಸಂಪರ್ಕಕ್ಕೆ ಬಂದರೆ ಅವರು ವ್ಯಸನಕ್ಕೆ ಬಲಿಯಾಗುವ ಸಾಧ್ಯತೆಯಿದೆ. ಹೀಗಾಗಿ ಮಕ್ಕಳ ಚಟುವಟಿಕೆಗಳ ಮೇಲೆ ಪೋಷಕರು ನಿಗಾ ವಹಿಸಬೇಕು. ಸಮಾಜದಲ್ಲಿ ಅಪರಾಧಗಳು ಹಾಗೂ ದುಶ್ಚಟಗಳನ್ನು ತಡೆಯಲು ವಿದ್ಯಾವಂತರು, ಪ್ರಜ್ಞಾವಂತರು ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಒಬ್ಬರ ಉತ್ತಮ ನಡೆ ಮತ್ತೊಬ್ಬರಿಗೆ ಪ್ರೇರಣೆಯಾಗಿ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬಹುದು ಎಂದು ಹೇಳಿದರು.
ನಾಯಿ ಕಡಿತ ಹಾಗೂ ಹಾವು ಕಡಿತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ ಮತ್ತು ಜೀವ ರಕ್ಷಣಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಹಾವು ಕಡಿತವಾದ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ಜನರಿಗೆ ತಿಳಿಸಬೇಕು ಎಂದರು. ಮನೆಯ ಸಮೀಪ ಹಾವು ಕಂಡುಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಈ ಕುರಿತು ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅಗತ್ಯ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕ್ಷಯರೋಗದ ಲಕ್ಷಣಗಳು ಕಂಡುಬಂದ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಆದ್ದರಿಂದ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಸಿದ್ಧಪಡಿಸಲಾದ ಕ್ಷಯರೋಗ ಜಾಗೃತಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಪರಶುರಾಮ ಎಫ್.ಕೆ., ಎಸಿಪಿ ಪ್ರಶಾಂತ ಸಿದ್ದನಗೌಡರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ರವೀಂದ್ರ ಆರ್. ಬೋವೇರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಬಿ. ಕಳಸೂರಮಠ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

